

ಬೆಂಗಳೂರು: ತೋಟಗಾರಿಕೆ ಇಲಾಖೆಯಲ್ಲಿ ಬ್ಯಾಕ್‌ಲಾಗ್ ಹುದ್ದೆಗಳನ್ನು ನೀಡದೆ ಅನ್ಯಾಯ ಮಾಡಲಾಗುತ್ತಿದೆ(Department of Horticulture; Injustice by not giving backlog post) ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಗಮನ ಸೆಳೆದಿದೆ.
ಸರ್ಕಾರದ ಆದೇಶದಂತೆ ರೋಸ್ಟರ್ ಬಿಂದುಗಳಿಗೆ ಎದುರಾಗಿ ಸಾಮಾನ್ಯ ವರ್ಗದವರಿಗೆ ಬಡ್ತಿ ನೀಡಿರುವ ಬಿಂದುಗಳನ್ನು ಬ್ಯಾಕ್‌ಲಾಗ್ ಹುದ್ದೆಗಳೆಂದು ಗುರುತಿಸಿದ ನಂತರವೇ ಮುಂಬಡ್ತಿ ನೀಡಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಗುರುತಿಸಿದ ಬಳಿಕವೇ ಮುಂಬಡ್ತಿ ನೀಡಲು ಕ್ರಮವಹಿಸಬೇಕು. ಸಾಮಾನ್ಯ ವರ್ಗದ ನೌಕರರ ಮನವಿ ಆಧರಿಸಿ ಬ್ಯಾಕ್‌ಲಾಗ್ ಹುದ್ದೆಗಳನ್ನು ನೀಡದೆ ಮುಂಬಡ್ತಿ ನೀಡಿದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಅನ್ಯಾಯವಾಗುವುದರಿಂದ ಇಲಾಖೆ ಕಾರ್ಯದರ್ಶಿಗಳು ತೋಟಗಾರಿಕೆ ಇಲಾಖೆ ನಿರ್ದೇಶಕರು ಎಸ್ಸಿ/ಎಸ್ಟಿ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸದೇ ಬ್ಯಾಕ್ ಲಾಗ್ ಹುದ್ದೆಗಳನ್ನು ನೀಡುವ ಮೂಲಕ ಸರ್ಕಾರದ ಆದೇಶ ಪಾಲನೆ ಮಾಡಬೇಕು.
ಬ್ಯಾಕ್‌ಲಾಗ್ ಹುದ್ದೆ ತುಂಬುವ ವೇಳೆ 24.6.1997 ಹಾಗೂ 4.3.2015ರ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಿ ಸಾಮಾನ್ಯ ರೋಸ್ಟರ್ ಬಿಂದುಗಳ ಜತೆಯಲ್ಲಿ ಬ್ಯಾಕ್‌ಲಾಗ್ ಹುದ್ದೆಗಳೊಂದಿಗೆ ಮೀಸಲಾತಿ ರೋಸ್ಟರ್ ಬಿಂದುಗಳನ್ನು ಪಾಲಿಸಿ ಮುಂಬಡ್ತಿ ನೀಡಲು ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ನಿರ್ದೇಶಕರಿಗೆ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ.ಚಂದ್ರಶೇಖರಯ್ಯ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.