ಭಯೋತ್ಪಾದನಾ ನಿಗ್ರಹ ಸಾಮರ್ಥ್ಯಗಳನ್ನು ಸಂಪೂರ್ಣವಾಗಿ ಬಳಸಿ: ಪ್ರಧಾನಿ ಮೋದಿ ಸೂಚನೆ

Untitled-design-85-1
Published on

ಜಮ್ಮು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಮತ್ತು ಸೇನೆ ಎನ್‌ಕೌಂಟರ್ ನಂತರ ಕಣಿವೆ ಪ್ರದೇಶದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದೆ. ಜಮ್ಮು ಮತ್ತು ಕಾಶ್ಮೀರದ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಹಾಗೂ ಭಯೋತ್ಪಾದನೆ ವಿರುದ್ಧ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ಈ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ವಿರೋಧಿ ಕ್ರಮಕ್ಕೆ ಸಂಪೂರ್ಣ ಶಕ್ತಿ ನೀಡುವಂತೆ ಅಧಿಕಾರಿಗಳು ಪ್ರಧಾನಿ ಅವರನ್ನು ಕೇಳಿಕೊಂಡಿದ್ದಾರೆ. ಮನವಿಯನ್ನು ಆಲಿಸಿದ ಮೋದಿ ಅವರು ಭಯೋತ್ಪಾದನಾ ನಿಗ್ರಹ ಸಾಮರ್ಥ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸೂಚನೆಗೂ ಮುನ್ನ ಈ ಪ್ರದೇಶಗಳಲ್ಲಿ ಭದ್ರತಾ ಪಡೆಗಳ ಮತ್ತಷ್ಟು ನಿಯೋಜನೆ ಮತ್ತು ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರಧಾನಿ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ಭಯೋತ್ಪಾದಕ ದಾಳಿಗಳು ನಡೆದಿವೆ. ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳ ನಾಲ್ಕು ಸ್ಥಳಗಳಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಇದರಿಂದ ಯಾತ್ರಿಕರು ಮೃತಪಟ್ಟಿದ್ದಾರೆ. ಒಬ್ಬರು ಸಿಆರ್​ಪಿಎಫ್​​ ಯೋಧ ಕೂಡ ಹುತಾತ್ಮರಾಗಿದ್ದಾರೆ. ಇದಲ್ಲದೆ ಏಳು ಭದ್ರತಾ ಸಿಬ್ಬಂದಿ ಮತ್ತು ಅನೇಕರು ಗಾಯಗೊಂಡಿದ್ದಾರೆ. (ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net