ಮತದಾನ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಚಾಲನೆ

MDK07
Published on

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿ, ಗೋಣಿಕೊಪ್ಪ ಕಾವೇರಿ ಕಾಲೇಜು ಮತ್ತು ವಿರಾಜಪೇಟೆ ದಂತ ಮಹಾವಿದ್ಯಾಲಯ ಇವರ ವತಿಯಿಂದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಹಾಗೂ ಮತದಾನದ ಮಹತ್ವ ಕುರಿತು ಜಾಗೃತಿ ಜಾಥಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶರವರು ಶುಕ್ರವಾರ ಚಾಲನೆ ನೀಡಿದರು.


ನಗರದ ಗಾಂಧಿ ಮೈದಾನದಲ್ಲಿ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ೨೦೨೩ ರ ಜ೧ ಕ್ಕೆ ೧೮ ವರ್ಷ ಪೂರ್ಣಗೊಂಡ ಎಲ್ಲರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಬೇಕು. ಜತೆಗೆ ಚುನಾವಣಾ ಸಂದರ್ಭದಲ್ಲಿ ಮತದಾನ ಮಾಡಬೇಕು. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ಮಾಡುವ ನಿಟ್ಟಿನಲ್ಲಿ ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಮತಹಕ್ಕು ಚಲಾಯಿಸಬೇಕು ಎಂದು ತಿಳಿಸಿದರು.


ಜಿ.ಪಂ.ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್ ಮಾತನಾಡಿ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನದ ಜಾಥ ಹಮ್ಮಿಕೊಳ್ಳಲಾಗಿದೆ ಎಂದರು.


ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯಸ್ಥ ಮಹಮ್ಮದ್ ಅಕ್ರಮ್ ಮಾತನಾಡಿ, ಮತದಾನದ ಜಾಗೃತಿ ಅಭಿಯಾನವು ಮಡಿಕೇರಿಯಲ್ಲಿ ಆರಂಭವಾಗಿ ಮೂರ್ನಾಡು ಮತ್ತು ವಿರಾಜಪೇಟೆಯಲ್ಲಿ ನಡೆಯಲಿದೆ. ಗ್ರಾಮ ಮಟ್ಟದಲ್ಲಿಯೂ ಸಹ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಆ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು, ಇತರರು ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಕೃಪಾ ಶಂಕರ್, ಜಿ.ಪಂ.ಯೋಜನಾ ಶಾಖೆಯ ನವೀನ್ ಇತರರು ಇದ್ದರು.


ನಗರದ ಬೀದಿಗಳಲ್ಲಿ ಜಾಥಾ: ನಗರದ ಗಾಂಧಿ ಮೈದಾನದಿಂದ ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾ ಗಾಂಧಿ, ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮೂಲಕ ಜಾಥ ನಡೆಯಿತು. ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಕೊಡಗು ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಎಚ್.ಟಿ.ಅನಿಲ್, ಎನ್‌ಸಿಸಿ ವಿದ್ಯಾರ್ಥಿಗಳು ಇತರರು ಜಾಥದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net