

ರಾಣೆಬೆನ್ನೂರ: ಮಾನವ ಯಾವಾಗಲೂ ಸುಖಾಪೇಕ್ಷಿ. ಆದರ್ಶ ಮತ್ತು ಅರಿವಿನಿಂದ ಮಾತ್ರ ಜೀವನ ಸಮೃದ್ಧಗೊಳ್ಳಲು ಸಾಧ್ಯ. ಜೀವನ ವಿಕಾಸಕ್ಕೆ ಧಮಾರ್ಚರಣೆ ಬಹಳ ಅವಶ್ಯಕವಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
ತಾಲೂಕಿನ ದೇವಗೊಂಡನಕಟ್ಟಿ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ಜನಜಾಗೃತಿ ಧರ್ಮ ಸಮಾರಂಭ, ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಹೊನ್ನಾಳಿ ಹಿರೇಕಲ್ಮಠದ ಒಡೆಯರ ಚಂದ್ರಶೇಖರ ಶಿವಾಚಾರ್ಯರ 10ನೇ ಪುಣ್ಯ ಸ್ಮರಣೋತ್ಸವದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಪ್ರತಿಯೊಬ್ಬ ಮನುಷ್ಯ ಜೀವನದಲ್ಲಿ ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ನಾಲ್ಕು ಚರ್ತುವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದಿದ್ದರೆ ಜೀವನ ವ್ಯರ್ಥವಾಗುತ್ತದೆ. ವೀರಶೈವ ಧರ್ಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಧರ್ಮದ ದಶ ವಿಧ ಸೂತ್ರಗಳನ್ನು ಬೋಧಿಸಿ ಉದ್ಧರಿಸಿದ್ದಾರೆ. ಜಾತಿ ಮತ ಪಂಥ ಎನ್ನದೆ ಎಲ್ಲ ವರ್ಗದ ಜನರಿಗೆ ವಿಶ್ವ ಬಂಧುತ್ವದ ಆದರ್ಶ ಮೌಲ್ಯಗಳನ್ನು ಬೋಧಿಸಿ ಉದ್ಧರಿಸಿದ್ದನ್ನು ಯಾವತ್ತೂ ಮರೆಯಲಾಗದು ಎಂದರು.
ಸಮಾರಂಭ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ವೀರಶೈವ ಧರ್ಮ ಅತ್ಯಂತ ಪ್ರಾಚಿನ ಧರ್ಮವಾಗಿದೆ. ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದ ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ತಪೋವಾಣಿ ಸರ್ವ ಕಾಲಕ್ಕೂ ಅನ್ವಯವಾಗುತ್ತದೆ. ಸಮಾಜದಲ್ಲಿ ಎಲ್ಲರೂ ಸಾಮರಸ್ಯ ಸದ್ಭಾವನೆಯಿಂದ ಬಾಳುವುದು ಅವಶ್ಯಕವಾಗಿದೆ ಎಂದರು.
ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ನಮ್ಮಲ್ಲಿ ಧಮಾರ್ಚರಣೆ ಬೆಳೆದು ಬರಬೇಕು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ನೀಡಬೇಕು ಎಂದರು.
ಹೊನ್ನಾಳಿ ಡಾ. ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಅವರಗೊಳ್ಳದ ಓಂಕಾರ ಶಿವಾಚಾರ್ಯರು, ಕಡೇನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯರು, ಲಿಂಗದಹಳ್ಳಿ ವೀರಭದ್ರ ಶಿವಾಚಾರ್ಯರು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯರು, ನಗರದ ಹಿರೇಮಠದ ಶಿವಯೋಗಿ ಶಿವಾಚಾರ್ಯರು ನೇತೃತ್ವ ವಹಿಸಿದ್ದರು.
ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳವರ ಸಂಭ್ರಮದ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು.
ಪ್ರಮುಖರಾದ ಜುಂಜಪ್ಪ ಹೆಗ್ಗಪ್ಪನವರ, ಎಸ್.ಎಸ್. ರಾಮಲಿಂಗಣ್ಣನವರ, ಸೋಮಶೇಖರಗೌಡ ಪಾಟೀಲ, ರಾಜಣ್ಣ ಮೋಟಗಿ, ಸಿದ್ದು ಚಿಕ್ಕಬಿದರಿ, ದಯಾನಂದ, ಕೆ.ಎನ್. ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕರಿಂದ ವೇದಘೋಷ ನಡೆಯಿತು. ಕಸ್ತೂರಿ ಪಾಟೀಲ ಮತ್ತು ಹಲಗೇರಿಯ ಗೀತಾ ಅಜ್ಜೋಡಿಮಠ ನಿರೂಪಿಸಿದರು.