

ಹಾವೇರಿ: ಡಿ.ದೇವರಾಜ ಅರಸು ಎಲ್ಲ ವರ್ಗಗಳಿಗೆ ಅಧಿಕಾರ ನೀಡಿದ ಧೀಮಂತ ನಾಯಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಕ್ರಾಂತಿಮಾಡಿದವರು ಹಾಗೂ ಪರಿವರ್ತನೆಯ ಹರಿಕಾರ ಎಂದು ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಡಿ. ದೇವರಾಜ ಅರಸು ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ ಡಿ. ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ನಾಮಕಾರಣ ಮಾಡಿದವರು. ಬ್ಯಾಂಕ್ ರಾಷ್ಟ್ರೀಕರಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆ ಸ್ಥಾಪನೆ, ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿನಿಲಯಗಳ ಸ್ಥಾಪನೆ ಸೇರಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದು ಎಂಟು ವರ್ಷ ರಾಜಕಾರಣದಲ್ಲಿ ಧ್ರುವತಾರೆಯಾಗಿ ಮಿಂಚಿದವರು ದೇವರಾಜರು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ಅಕ್ಷಯ ಶ್ರೀಧರ ಮಾತನಾಡಿ, ಡಿ. ದೇವರಾಜ ಅರಸು ಅವರು ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು. ಅವರ ಜೀವನ ಎಲ್ಲರಿಗೂ ಮಾದರಿಯಾಗಿದೆ ಎಂದರು.
ಹಾನಗಲ್ಲನ ಅರಳೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರಭಾರ ಪ್ರಾಂಶುಪಾಲ ಎಚ್.ಜಿ. ಅರುಣಕುಮಾರ ಉಪನ್ಯಾಸ ನೀಡಿದರು. ಡಿ.ದೇವರಾಜ ಅರಸು ಅವರ ಜೀವನ ಹಾಗೂ ರಾಜಕೀಯ ಆಡಳಿತದ ಸಮಗ್ರ ಮಾಹಿತಿಯುಳ್ಳ ಕಿರು ಚಿತ್ರ ಪ್ರದರ್ಶಿಸಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸದ್ಭಾವನಾ ದಿನಾಚರಣೆ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ ಕೆ.ಎನ್. ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಪುರಸಿದ್ದೇಶ್ವರ ದೇವಸ್ಥಾನ ಆವರಣದಿಂದ ಹೊರಟ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ಎಸ್.ಎಸ್. ಅಡಿಗ, ಎಸ್.ಎಫ್.ಎನ್. ಗಾಜೀಗೌಡ್ರ, ಎಂ.ಎಸ್. ಕೋರಿಶಟ್ಟರ, ರಮೇಶ ಆನವಟ್ಟಿ, ಹುಲ್ಲಪ್ಪ ಜಾಡರ, ಸುಭಾಸ ಬೆಂಗಳೂರು, ಗಿರೀಶ ಬಾರ್ಕಿ, ಪ್ರಸನ್ನಕುಮಾರ ಹಿರೇಮಠ ಇತರರು ಉಪಸ್ಥಿತರಿದ್ದರು.