

ಶಿವಮೊಗ್ಗ: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಕ್ಷೇತ್ರದ ಭಕ್ತರನ್ನು ಕೆರಳಿಸಿದೆ. ಮಂಜುನಾಥೇಶ್ವರ ದೇವಸ್ಥಾನ ಹಾಗೂ ಧರ್ಮಾಧಿಕಾರಿಗಳಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂಬುದು ಭಕ್ತರ ಆರೋಪ. ಇದರಿಂದ ಸಿಡಿದೆದ್ದ ನೂರಾರು ಸಂಖ್ಯೆಯ ಭಕ್ತರು ಸೋಮವಾರ ಶಿವಮೊಗ್ಗದಲ್ಲಿ ಬೀದಿಗಿಳಿದು ಪ್ರತಿಭಟಿಸಿದರು.
ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಹೆಸರಿನಲ್ಲಿ ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಒಗ್ಗೂಡಿದ ಹಿಂದುಗಳು ಕಪ್ಪು ಪಟ್ಟಿ ಧರಿಸಿ ಸೀನಪ್ಪ ಶೆಟ್ಟಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೌನ ಮೆರವಣಿಗೆ ನಡೆಸಿದರು. ಬಳಿಕ ಡಿಸಿ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಅನಾಮಿಕ ವ್ಯಕ್ತಿಯೊಬ್ಬ ಹೇಳಿದ ಎಂಬ ಕಾರಣಕ್ಕೆ ಸಿಕ್ಕ ಸಿಕ್ಕಲ್ಲಿ ಗುಂಡಿ ಅಗೆದಿದ್ದು ಸಾಕು. ಇದರಿಂದ ಸರ್ಕಾರ ಸಾಧಿಸಿದ್ದಾದರೂ ಏನು? ಅಗೆಯುವುದನ್ನು ಬಿಟ್ಟು ದೂರು ನೀಡಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿ. ಆತನ ಹಿಂದೆ ಬೆಂಬಲಕ್ಕೆ ನಿಂತವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.
ಇದು ಆರಂಭ ಮಾತ್ರ. ಮುಂದಿನ ದಿನಗಳಲ್ಲಿ ಜಿಲ್ಲೆಯ ಗಲ್ಲಿ ಗಲ್ಲಿಗಳಲ್ಲೂ ಪ್ರತಿಭಟನೆ ನಡೆಸಬೇಕಾಗುತ್ತದೆ. ಹಿಂದುಗಳ ಧಾರ್ಮಿಕ ಕೇಂದ್ರಕ್ಕೆ ಅಪಚಾರ ಆಗುವುದನ್ನು ಎಂದಿಗೂ ಸಹಿಸುವುದಿಲ್ಲ. ಹಿಂದುಗಳು ಜಾಗೃತರಾಗಿ ಬೀದಿಗಿಳಿದರೆ ಸರ್ಕಾರವೇ ಇರುವುದಿಲ್ಲ ಎಂದು ಪರೋಕ್ಷವಾಗಿ ಎಚ್ಚರಿಕೆ ರವಾನಿಸಲಾಯಿತು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಸೊಪ್ಪುಗುಡ್ಡೆ ರಾಘವೇಂದ್ರ, ಜೈನ ಮಿಲನ್ ಪದಾಧಿಕಾರಿಗಳು, ಧರ್ಮಸ್ಥಳ ಸ್ವಸಹಾಯ ಸಂಘಗಳ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.