ಕೋಮುವಾದಿ ಪಕ್ಷ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್​​ಗೆ ಯಾವ ಸಿದ್ದಾಂತವಿದೆ?: ದಿನೇಶ್ ಗುಂಡೂರಾವ್​​

Untitled design (46)
Published on

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್​ ಕುರಿತು ಸರಣಿ ಟ್ವೀಟ್​ ಮಾಡುವ ಮುಖೇನ ವ್ಯಂಗ್ಯವಾಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್​​, ಬಿಜೆಪಿಯ ಬಿ ಟೀಂ ಜೆಡಿಎಸ್​​ ಎಂದು ನಾವು ಅನೇಕ ಬಾರಿ ಹೇಳಿದ್ದೆವು ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.

ಈ ಕುರಿತು ಟ್ವೀಟ್​​ ಮಾಡಿರುವ ಸಚಿವ ದಿನೇಶ್​ ಗುಂಡೂರಾವ್​​, "ಈಗ ಎಚ್​.ಡಿ. ಕುಮಾರಸ್ವಾಮಿ ಅವರು ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್​​ ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ.‌ ಕೋಮುವಾದಿ ಪಕ್ಷ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜನತಾದಳಗೆ ಯಾವ ಸಿದ್ದಾಂತವಿದೆ? ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ" ಎಂದು ಟ್ವೀಟ್​​ ಮಾಡಿದ್ದಾರೆ.

"ಜೆಡಿಎಸ್​​ ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ ಬಿಜೆಪಿ ಜತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ ಎಚ್​​ಡಿಕೆ ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ ಜೆಡಿಎಸ್​​ನ ಅವನತಿ ಶುರುವಾಗಿದ್ದು. 2004 ರಲ್ಲಿ 59 ಸ್ಥಾನ ಗೆದ್ದಿದ್ದ ಜನತಾದಳ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ" ಎಂದು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

"ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ ಎಚ್​​ಡಿಕೆ ಅವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌" ಎಂದು ಟ್ವೀಟ್​​ ಮುಖೇನ ವ್ಯಂಗ್ಯವಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net