

ಬೆಂಗಳೂರು: ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಧಿಕಾರವನ್ನು ನಮ್ಮ ಪಕ್ಷದ ಶಾಸಕರು ನನಗೆ ನೀಡಿದ್ದು, ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೆಗೌಡರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷ ಹಾಗೂ ಕೋರ್ ಕಮಿಟಿ ಸಭೆಗಳ ನಂತರ ಮಾಧ್ಯಮಗಳ ಜತೆ ಮಾತನಾಡಿದರು.
ಈ ತಿಂಗಳ 15ರಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ನಮ್ಮ ಶಾಸಕರ ಜತೆ ಸುದೀರ್ಘವಾಗಿ ಚರ್ಚೆ ನಡೆಸಿ ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕರನ್ನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ದೇವೆಗೌಡರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಶಾಸಕರು ನನಗೆ ಅಧಿಕಾರ ನೀಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಪಕ್ಷವನ್ನು ತಳಮಟ್ಟದಿಂದ ಮರು ಸಂಘಟನೆ ಮಾಡುವುದು, ಸದಸ್ಯತ್ವ ಅಭಿಯಾನವನ್ನು ದೊಡ್ಡ ಪ್ರಮಾಣದಲ್ಲಿ ನಡೆಸುವುದು, ವಿಧಾನ ಮಂಡಲದ ಕಲಾಪದಲ್ಲಿ ಮಿತ್ರಪಕ್ಷ ಬಿಜೆಪಿ ಜತೆ ಸೇರಿ ಜನಪರವಾಗಿ ಹೋರಾಟ ನಡೆಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಲಾಯಿತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಅತ್ಯಂತ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಪದಾಧಿಕಾರಿಗಳ ಬದಲಾವಣೆ ಮಾಡಲಾಗುವುದು. ಹೊಸ ರಾಜ್ಯಾಧ್ಯಕ್ಷರ ಚುನಾವಣೆಯೂ ನಡೆಯಲಿದೆ. ಸದಸ್ಯತ್ವ ಅಭಿಯಾನಕ್ಕೆ ರಾಜ್ಯದ 31 ಜಿಲ್ಲೆಗಳಲ್ಲಿನ ವಿಧಾನಸಭೆ ಕ್ಷೇತ್ರಗಳಲ್ಲಿ ಮುಖಂಡರಿಗೆ ಉಸ್ತುವಾರಿ ಕೊಡಲಾಗುವುದು ಎಂದರು.
ಕೋರ್ ಕಮಿಟಿ ಸದಸ್ಯರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಎಲ್ಲರೂ ಈ ಬಗ್ಗೆ ಬದ್ಧತೆಯಿಂದ ಕೆಲಸ ಮಾಡಬೇಕು. ಈ ಮೂಲಕ ನಾವು ಜೆಡಿಎಸ್ ಪಕ್ಷವನ್ನು ಕೇಡರ್ ಬೇಸ್ ಪಕ್ಷವನ್ನಾಗಿ ರೂಪಿಸುತ್ತೇವೆ ಎಂದು ಹೇಳಿದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಅವಿರತವಾಗಿ ಶ್ರಮಿಸಿ ಒಳ್ಳೆಯ ಫಲಿತಾಂಶ ತಂದುಕೊಟ್ಟಿದ್ದಾರೆ. ಇವರೆಲ್ಲರ ಶ್ರಮ, ಮಂಡ್ಯ ಜನತೆಯ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದೇನೆ. ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ. ಅದಕ್ಕೆ ಏನೆಲ್ಲ ಮಾಡಬೇಕು ಎಂಬ ಬಗ್ಗೆ ನಾಯಕರು, ಶಾಸಕರ ಜತೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು.
ಸಾಮೂಹಿಕ ಜವಾಬ್ದಾರಿ ಮೂಲಕ ಸಂಘಟನೆಗೆ ಹೆಚ್ಚು ಶಕ್ತಿ ತುಂಬಲು ನಿರ್ಧಾರ ಮಾಡಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಸಂಘಟನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಕೊಳ್ಳಬೇಕು ಎಂದು ಎಲ್ಲರೂ ಸಲಹೆ ನೀಡಿದ್ದಾರೆ. ಅದರಂತೆ ನಿಖಿಲ್ ಅವರು ಪಕ್ಷದ ಸಂಘಟನೆಯಲ್ಲಿ ಹೆಚ್ಚು ಸಮಯ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಿದರು.
ಇದಕ್ಕೂ ಮೊದಲು ನಡೆದ ಶಾಸಕಾಂಗ ಪಕ್ಷ ಹಾಗೂ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ, ಸಾ.ರಾ.ಮಹೇಶ್, ವೆಂಕಟರಾವ್ ನಾಡಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.