ಮಕ್ಕಳನ್ನು ಪ್ರೋತ್ಸಾಹಿಸಲು ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಪರಿಕರ ವಿತರಣೆ

21jyp02
ಅಗಳಗಂಡಿ ಸರ್ಕಾರಿ ಶಾಲೆ ಮಕ್ಕಳಿಗೆ ಸ್ಪಂದನ ಸಂಸ್ಥೆಯಿಂದ ಶೈಕ್ಷಣಿಕ ಪರಿಕರ ವಿತರಿಸಲಾಯಿತು.
Published on

ಜಯಪುರ: ಗ್ರಾಮೀಣ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಲ್ಪಟ್ಟರೆ ಮುಂದಿನ ದಿನಗಳಲ್ಲಿ ಆ ಭಾಗದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಲಿದೆ. ಈ ಕಾರಣಕ್ಕೆ ಮಕ್ಕಳನ್ನು ಪ್ರೋತ್ಸಾಹಿಸುವ ಸಲುವಾಗಿ ಕುಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಪರಿಕರಗಳನ್ನು ನೀಡಲಾಗುತ್ತಿದೆ ಎಂದು ಸ್ಪಂದನ ಸ್ವಯಂ ಸೇವಾ ಸಂಸ್ಥೆ ಅಧ್ಯಕ್ಷ ಕಿಬ್ಳಿ ಪ್ರಸನ್ನಕುಮಾರ್ ಹೇಳಿದರು.
ಮೇಗುಂದಾ ಹೋಬಳಿ ವ್ಯಾಪ್ತಿಯ ಅಗಳಗಂಡಿ ಸರ್ಕಾರಿ ಶಾಲೆ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಿಸಿ ಮಾತನಾಡಿದ ಅವರು, ಹೋಬಳಿ ವ್ಯಾಪ್ತಿಯ ಹಲವು ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಸ್ಥಿತಿಯಲ್ಲಿವೆ. ಈ ಶಾಲೆಗಳು ಮುಚ್ಚಿದರೆ ಮಕ್ಕಳನ್ನು ದೂರದ ಶಾಲೆಗಳಿಗೆ ಕಳುಹಿಸುವುದು ಪಾಲಕರಿಗೆ ಕಷ್ಟವಾಗಲಿದೆ ಎಂದರು.
ಸರ್ಕಾರಿ ಶಾಲೆಗಳಿಗೆ ಹೆಚ್ಚು ವಿದ್ಯಾರ್ಥಿಗಳು ಬರುವಂತೆ ಪ್ರೋತ್ಸಾಹಿಸಲು ವಿದ್ಯಾರ್ಥಿಗಳಿಗೆ ಬ್ಯಾಗ್, ಛತ್ರಿ, ಟೋಪಿ ಹಾಗೂ ನೋಟ್‌ಬುಕ್ ಮತ್ತಿತರ ಶೈಕ್ಷಣಿಕ ಪರಿಕರಗಳನ್ನು ಸಂಸ್ಥೆಯ ಸದಸ್ಯರು ಹಾಗೂ ದಾನಿಗಳ ಸಹಕಾರ ಪಡೆದು ವಿತರಿಸುತ್ತಿದ್ದೇವೆ ಎಂದು ತಿಳಿಸಿದರು.
ಸಂಸ್ಥೆಯ ಕಾರ್ಯದರ್ಶಿ ಅರ್ಪಿತಾ ಹರೀಶ್ ಮಾತನಾಡಿ, ಅಶಕ್ತರಿಗೆ ನಮ್ಮ ಕೈಲಾದ ಸಹಾಯ ಮಾಡಬೇಕು ಎನ್ನುವ ಕಾರಣಕ್ಕಾಗಿ ಸ್ಪಂದನ ಸಂಸ್ಥೆ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದೆ. ಶಿಕ್ಷಣ, ಪರಿಸರ ಸಂರಕ್ಷಣೆ, ನೈರ್ಮಲ್ಯ ಹಾಗೂ ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ಜೀವನ ರೂಪಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸಮಾಜಕ್ಕೆ ಇದೇ ರೀತಿ ಸಹಕಾರ ನೀಡಬೇಕು ಎಂದು ಆಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net