

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಿಗೂ ಟೆಲಿಸ್ಕೋಪ್ ವಿತರಿಸಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ನೀಡಲಾಗುತ್ತಿದೆ. ಇದಕ್ಕಾಗಿ 3 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಸುಮನಹಳ್ಳಿಯಲ್ಲಿರುವ ಡಾ. ಬಾಬು ಜಗಜೀವನ್‌ರಾಮ್ ಸಂಶೋಧನಾ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಸಂವಾದದಲ್ಲಿ ಅವರು ಮಾತನಾಡಿದರು.
ರಾಜ್ಯದ ಎಲ್ಲ ಶಾಲೆಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಅನುಕೂಲವಾಗುವಂತೆ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಆರಂಭಿಸಲು ಬಜೆಟ್‌ನಲ್ಲಿ ೋಷಿಸಲಾಗಿತ್ತು. ಅದರಂತೆ 4 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲಾ ಕೇಂದ್ರಗಳಲ್ಲಿ ಉಪ ಕೇಂದ್ರಗಳು, ಮೈಸೂರು ಮತ್ತು ಹೊಸಪೇಟೆಯಲ್ಲಿ ಪ್ರಾದೇಶಿಕ ಕೇಂದ್ರಗಳು ಹಾಗೂ ಮಂಗಳೂರಿನಲ್ಲಿ ವಿಜ್ಞಾನ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಇಬ್ಬರು ವಿದ್ಯಾರ್ಥಿಗಳು ಮತ್ತು ಒಬ್ಬರು ಪಾಲಕರಿಗೆ ಟೆಲಿಸ್ಕೋಪ್ ವಿತರಿಸಲಾಯಿತು.
ಮೂಢನಂಬಿಕೆ, ಅಜ್ಞಾನವನ್ನು ಕಳೆದು ಜ್ಞಾನವನ್ನು ಹೊಂದಲು ವಿಜ್ಞಾನ ಮತ್ತು ತಂತ್ರಜ್ಞಾನ ಅವಶ್ಯಕವಾಗಿದೆ. ವಿಜ್ಞಾನದ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸಲು ಈ ಸಂವಾದ ಆಯೋಜಿಸಲಾಗಿದೆ. - ಎಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ