

ಚಿಕ್ಕಮಗಳೂರು: ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಮಾರ್ಗಸೂಚಿ ಉಲ್ಲಂಘನೆಯಾದರೆ ಕಾರ್ಯಕ್ರಮ ಸಂಘಟಕರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಎಚ್ಚರಿಕೆ ನೀಡಿದರು.
ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಅಂಗವಾಗಿ ಗುರುವಾರ ಜಿಪಂನಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿ, ಹಬ್ಬದ ಆಚರಣೆಯಲ್ಲಿ ಶಿಸ್ತು ಪಾಲನೆ ಮಾಡಬೇಕು. ಪೊಲೀಸ್ ಬಂದೋಬಸ್ತ್ ಜತೆಗೆ ಸಮಿತಿಯಿಂದ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪರಿಸರ ರಕ್ಷಣೆಗೆ ಒತ್ತು ನೀಡಬೇಕು. ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪನೆ ಮಾಡಬೇಕು. ನಿಷೇಧಿತ ಪಿಒಪಿ ಗಣಪತಿ ಮೂರ್ತಿಯನ್ನು ಪೂಜಿಸಿದರೆ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ನೀರಿನಲ್ಲಿ ಕರಗಬಹುದಾದ ವಸ್ತುಗಳಿಂದ ತಯಾರಿಸಿರುವ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು ಎಂದು ಸಲಹೆ ನೀಡಿದರು.
ಗಣಪತಿ ಪ್ರತಿಷ್ಠಾಪನೆಗೆ ಸ್ಥಳೀಯ ಸಂಸ್ಥೆ, ಮೆಸ್ಕಾಂ, ಪೊಲೀಸ್, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡಿದ ದಿನದಿಂದ ವಿಸರ್ಜನೆ ತನಕ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ನೀಡಬಾರದು. ಮೂರ್ತಿಗೆ ಭಂಗ ಉಂಟಾಗದಂತೆ ಎಚ್ಚರವಹಿಸಬೇಕು. ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮಗಳನ್ನು ಆಯೋಜನೆ ಕುರಿತು ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಎಎಸ್ಪಿ ಕೃಷ್ಣಮೂರ್ತಿ ಇದ್ದರು.
ಸಾರ್ವಜನಿಕರಿಗೆ ತೊಂದರೆ ನೀಡುವುದು, ಬಲವಂತವಾಗಿ ಚಂದಾ ವಸೂಲಿ ಮಾಡುವ ದೂರು ಬಂದರೆ ಸುಮ್ಮನಿರುವುದಿಲ್ಲ. ಕರೊನಾ ಸಂದರ್ಭದಲ್ಲಿ ಎಲ್ಲ ಹಬ್ಬಗಳ ಆಚರಣೆ ಕಳೆಗುಂದಿತ್ತು. ಈ ಹಿಂದೆ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಉಂಟಾದ ಅಹಿತಕರ ಘಟನೆಗಳಿಂದಾಗಿ ಸರ್ಕಾರ ಕೆಲವು ನಿಬರ್ಂಧಗಳನ್ನು ವಿಧಿಸಿದ್ದು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ದಂಟರಮಕ್ಕಿ ಕೆರೆಯಲ್ಲಿ ಗಣೇಶಮೂರ್ತಿಗಳ ವಿಸರ್ಜನೆಗೆ ಪ್ರತಿವರ್ಷ ವ್ಯವಸ್ಥೆ ಮಾಡಲಾಗುತ್ತಿತ್ತು. ಕೆರೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವುದರಿಂದ ಹಿರೇಮಗಳೂರು ಸಮೀಪ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಮಾಡಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಚಿಂತಿಸಿತ್ತು. ವಿಸರ್ಜನಾ ಮೆರವಣಿಗೆಗೆ ದೂರವಾಗುತ್ತದೆ ಹಾಗೂ ಕೆಲ ಸಂಘಟನೆಗಳಿಂದ ಆಕ್ಷೇಪಗಳು ವ್ಯಕ್ತವಾದ್ದರಿಂದ ದಂಟರಮಕ್ಕಿ ಕೆರೆಯಲ್ಲಿ ತಾತ್ಕಾಲಿಕ ಕಲ್ಯಾಣಿ ನಿರ್ಮಾಣಕ್ಕೆ ವ್ಯವಸ್ಥೆ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಕಾರ್ಯಕ್ರಮ ಆಯೋಜಕರು ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು, ಪರಿಸರ ಸ್ನೇಹಿ ವಿಗ್ರಹಗಳ ಪ್ರತಿಪ್ಠಾಪನೆ, ಸ್ವಯಂಸೇವಕರನ್ನು ನೇಮಿಸಿಕೊಳ್ಳಬೇಕು. ಆ ಮೂಲಕ ಹಬ್ಬವನ್ನು ಶಾಂತಿಯುತವಾಗಿ ಸಂಭ್ರಮದಿಂದ ಆಚರಿಸಬೇಕು ಎಂದು ಎಸ್ಪಿ ಡಾ. ವಿಕ್ರಮ ಅಮಟೆ ಹೇಳಿದರು.
ಜಿಲ್ಲೆಯ 1700 ಕಡೆಗಳಲ್ಲಿ ಗಣೇಶಮೂರ್ತಿಗಳನ್ನು ಸ್ಥಾಪಿಸುವ ಮಾಹಿತಿ ಬಂದಿದೆ. ಆಯಾ ವ್ಯಾಪ್ತಿಯ ಠಾಣಾ ಪೊಲೀಸ್ ಅಧಿಕಾರಿಗಳು ಗಸ್ತು ಮಾಡಿ ಪರಿಶೀಲನೆ ನಡೆಸಬೇಕು. ಅಹಿತಕರ ಘಟನೆಗಳು ಸಂಭವಿಸುವ ಮುನ್ಸೂಚನೆಯಿದ್ದರೆ ಕೂಡಲೇ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ಡಾ. ಬಿ.ಗೋಪಾಲ್ ಕೃಷ್ಣ ಮಾತನಾಡಿ, ಹಬ್ಬ ಎಂದರೆ ಪ್ರತಿಯೊಬ್ಬರಿಗೂ ಸಂಭ್ರಮ. ಆಚರಣೆ ಸಂದರ್ಭದಲ್ಲಿ ಅನಾಹುತ ಆಗಬಾರದೆಂದು ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಹೇಳಿದರು.