

ಹಾವೇರಿ: ಜಿಲ್ಲೆಯಲ್ಲಿ ಗಭಿರ್ಣಿಯರ ನೋಂದಣಿ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಅವಧಿಗೆ ಮುನ್ನ ಹೆರಿಗೆಯಾಗುತ್ತಿರುವ ಬಗ್ಗೆ ಕಾರಣಗಳನ್ನು ತಿಳಿದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಕಣ್ಗವಾಲು ಸಮಿತಿ ಸಭೆಯಲ್ಲಿ ಗಭಿರ್ಣಿಯರ ನೋಂದಣಿ, ಅವಧಿಗೆ ಮುನ್ನ ಹೆರಿಗೆ ಪ್ರಮಾಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗ್ರಾಮೀಣ ಪ್ರದೇಶದಲ್ಲಿ ಗಭಿರ್ಣಿಯರ ನೋಂದಣಿಗೆ ಆದ್ಯತೆ ನೀಡುವಂತೆ ಹಾಗೂ ಆರೋಗ್ಯ ಇಲಾಖೆ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ಆಶಾ ಕಾರ್ಯಕರ್ತರಿಗೆ ಸೂಚನೆ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ, ಗಭಿರ್ಣಿಯರು, ಬಾಣಂತಿಯರು, ಶಿಶುಗಳ ಆರೋಗ್ಯದ ಬಗ್ಗೆ ವಿಚಾರಣೆ ಮಾಡಬೇಕು. ಯಾರಿಗೂ ಕೆಲಸದಲ್ಲಿ ಆಸಕ್ತಿ ಕಾಣುತ್ತಿಲ್ಲ, ಬರುವ ದಿನಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ ಕೆಲಸಮಾಡಬೇಕು. ಸರ್ಕಾರದ ಆರೋಗ್ಯ ಯೋಜನೆಗಳು ಎಲ್ಲರಿಗೂ ತಲುಪಿಸಬೇಕು. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಆರೋಗ್ಯ ಇಲಾಖೆ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಅತ್ಯಂತ ಕಾಳಜಿಯಿಂದ ಹಾಗೂ ಮುತುವಜಿರ್ಯಿಂದ ಕೆಲಸಮಾಡಬೇಕು ಎಂದು ಸೂಚಿಸಿದರು.
ಗಭಿರ್ಣಿಯರು, ಬಾಣಂತಿಯರು ಹಾಗೂ ಶಿಶುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಸಹಿಬೇಕು. ಅವರಿಗೆ ಕಾಲಕಾಲಕ್ಕೆ ಅಗತ್ಯ ಚುಚ್ಚುಮದ್ದು ಹಾಗೂ ಮಾತ್ರೆಗಳನ್ನು ನೀಡುವ ಜೊತೆಗೆ ಆರೋಗ್ಯ ಶಿಕ್ಷಣ ನೀಡಬೇಕು. ತುರ್ತು ಚಿಕಿತ್ಸೆಗೆ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಬೇರೆ ಆಸ್ಪತ್ರೆಗೆ ಕಳುಹಿಸುವ ಮೊದಲು ಅಗತ್ಯ ಪ್ರಥಮ ಚಿಕಿತ್ಸೆ ನೀಡಬೇಕು ಎಂದು ಎಚ್ಚರಿಕೆ ನೀಡಿದರು.
ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕಾ ಆಸ್ಪತ್ರೆಗಳಲ್ಲಿ ಅಗತ್ಯ ಚುಚ್ಚುಮದ್ದು, ಔಷಧಿಗಳು ಹಾಗೂ ಮಾತ್ರೆಗಳು, ನಾಯಿಕಡಿತ ಹಾಗೂ ಹಾವು ಕಡಿತಕ್ಕೆ ನೀಡುವ ಚುಚ್ಚುಮದ್ದುಗಳ ದಾಸ್ತಾನು ಮಾಡಿಕೊಳ್ಳಬೇಕು. ಬಡವರಿಗೆ ಅಗತ್ಯ ಆರೋಗ್ಯ ಸೇವೆ ಸಿಗುವಂತಾಗಬೇಕು ಎಂದರು.
ಸಾರ್ವಜನಿಕ ವಲಯದಲ್ಲಿ ಡೆಂ ಲಾರ್ವಾ ಉತ್ಪತ್ತಿ ಸ್ಥಾನಗಳು ಕಂಡುಬಂದಲ್ಲಿ ಗ್ರಾಮೀಣ ಭಾಗದಲ್ಲಿ ಪಂಚಾಯತ್ ಅಧಿಕಾರಿಗಳಿಗೆ ಹಾಗೂ ನಗರ ಪ್ರದೇಶದಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಯಾನಂದ, ಡಾ. ನೀಲೇಶ, ಡಾ. ಜಗದೀಶ ಪಾಟೀಲ, ಡಾ. ಚನ್ನವಿರಯ್ಯ ವಿರಕ್ತಮಠ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹಾಗೂ ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.