

ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಇಲಾಖೆಯ ಅಧಿಕಾರಿಗಳು ಕನಿಷ್ಠ 4 ವರ್ಷ ಸೇವೆ ಸಲ್ಲಿಸಬೇಕು ಎಂಬುದು ನಮ್ಮ ಆಶಯ. ಹೀಗಾಗಿ ಯಾವುದೇ ಅಧಿಕಾರಿಯನ್ನು ಒಂದೇ ವರ್ಷದಲ್ಲಿ ಬದಲಾವಣೆ ಮಾಡುವ ಪದ್ಧತಿ ನಮ್ಮಲ್ಲಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ನಗರದ ಕೆಪಿಟಿಸಿಎಲ್ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಎನ್‌ಡಬ್ಲ್ಯುಕೆಆರ್‌ಟಿಸಿ) ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಅಧಿಕಾರಿಗಳ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅಧಿಕಾರಿಗಳ ವರ್ಗಾವಣೆ ವಿಷಯವಾಗಿ ಶಾಸಕರ ಬಳಿ ನಾವು ಪತ್ರ ಪಡೆಯುತ್ತೇವೆ. ನೀವು ಪತ್ರ ನೀಡಿ ಎಂದಾಗ ಅಧಿಕಾರಿಗಳಿಗೆ ವರ್ಗಾವಣೆಗಾಗಿ ನಾವು ಪತ್ರ ನೀಡಿರುತ್ತೇವೆ ಅಷ್ಟೇ. ಈ ವಿಷಯದಲ್ಲಿ ಶಾಸಕರ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಇದೊಂದು ಸಾಮಾನ್ಯ ಪ್ರಕ್ರಿಯೆ ಎಂದರು.
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಸೇರಿ ಎಲ್ಲ ಸಾರಿಗೆ ನಿಲ್ದಾಣಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಜತೆಗೆ ಪ್ರಯಾಣಿಕರ ಸುರಕ್ಷತೆಗೆ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು. ಬಸ್ ನಿಲ್ದಾಣಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಮುನ್ನಚ್ಚೆರಿಕೆ ಕ್ರಮ ವಹಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ದೂರದ ಊರುಗಳಿಗೆ ತೆರಳುವ ಬಸ್‌ಗಳಲ್ಲಿ ಭದ್ರತಾ ಕ್ರಮವಾಗಿ ಸಿಸಿಟಿವಿ ಕ್ಯಾಮರಾ ಅಳವಡಿಸುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.
ಮಹಾನಗರದಲ್ಲಿ ಹಾಳಾಗಿರುವ ರಸ್ತೆಗಳ ದುರಸ್ತಿ ಮಾಡುವುದು ಪಾಲಿಕೆಯ ಜವಾಬ್ದಾರಿಯಾಗಿದ್ದು, ಅವರೇ ಪಾಲಿಕೆ ಅನುದಾನದಲ್ಲಿ ದುರಸ್ತಿ ಮಾಡಿಕೊಳ್ಳಬೇಕು. ಸರ್ವೀಸ್ ರಸ್ತೆಗಳು ಹಾಳಾಗಿದ್ದರ ಕುರಿತು ಎನ್‌ಎಚ್‌ಐ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಎನ್‌ಡಬ್ಲ್ಯುಕೆಆರ್‌ಟಿಸಿ ಅಧ್ಯಕ್ಷ ರಾಜು ಕಾಗೆ, ಶಾಸಕರಾದ ವಿಶ್ವಾಸ ವೈದ್ಯ, ಆಸೀಫ್ ಸೇಠ್, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಎನ್‌ಡಬ್ಲ್ಯುಕೆಆರ್‌ಟಿಸಿ ಎಂ.ಡಿ ಪ್ರಿಯಾಂಗ್ .ಎಸ್ ಇತರರಿದ್ದರು.
ಯಲ್ಲಮ್ಮನಗುಡ್ಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ 100 ಕೋಟಿ ರೂ. ಅನುದಾನ ನೀಡಿರುವುದು ನಿಜ. ಆದರೆ, ಸಂಸದ ಜಗದೀಶ ಶೆಟ್ಟರ್ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಲ್ಲ. ಹಾಗಾಗಿ ಅವರನ್ನು ಸಭೆಗೆ ಆಹ್ವಾನಿಸುತ್ತಿಲ್ಲ. ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ