

ಶಿಮ್ಲಾ: ಹಿಮಾಚಲಪ್ರದೇಶದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಎದುರಿಸುತ್ತಿರುವ ಬಂಡಾಯವನ್ನು ಶಮನಗೊಳಿಸಲು ಟ್ರಬಲ್ಶೂಟರ್ ಎಂದೇ ಖ್ಯಾತಿ ಪಡೆದಿರುವ ಕರ್ನಾಟಕದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹಾಯವನ್ನು ಪಕ್ಷದ ಹೈಕಮಾಂಡ್ ಕೋರಿದೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಹಿಮಾಚಲಪ್ರದೇಶಕ್ಕೆ ತೆರಳಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಲ್ಲಿನ ಬಂಡಾಯ ನಾಯಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.
ಫೆಬ್ರವರಿ 27ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ನ ಆರು ಹಾಗೂ ಮೂವರು ಪಕ್ಷೇತರ ಶಾಸಕರು ಬಿಜೆಪಿ ಅಭ್ಯರ್ಥಿ ಪರ ಅಡ್ಡಮತ ಚಲಾಯಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿತ್ತು.
ಈ ನಡುವೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಾವು ತಮ್ಮ ಸರ್ಕಾರದ ಬಹುಮತವನ್ನು ಸದನದಲ್ಲಿ ಸಾಬೀತುಪಡಿಸುವುದಾಗಿ ಹೇಳಿದ್ದಾರೆ. “ಯಾರೂ ನನ್ನ ರಾಜೀನಾಮೆ ಕೇಳಿಲ್ಲ ನಾನು ರಾಜೀನಾಮೆ ಕೊಡುವುದಿಲ್ಲ. ನಾನು ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುತ್ತೇನೆ ಮತ್ತು ಅದರಲ್ಲಿ ಗೆಲ್ಲುವ ವಿಶ್ವಾಸ ನನಗಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹೇಳಿದ್ದರು.
ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸೀಎಂ ದಿವಂಗತ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ತಮ್ಮ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಿಮಾಚಲ ಸರ್ಕಾರದಲ್ಲಿ ಶಾಸಕರ ಧ್ವನಿ ಅಡಗಿಸಲಾಗುತ್ತಿದೆ. ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ವಿಕ್ರಮಾದಿತ್ಯ ಸಿಂಗ್ ತಾವು ರಾಜ್ಯ ಸರ್ಕಾರದಿಂದ ಭಾವನಾತ್ಮಕವಾಗಿ ನೊಂದಿರುವುದಾಗಿ ರಾಜೀನಾಮೆ ಬಳಿಕ ಹೇಳಿದರು.
ಇನ್ನು ಪತಮದ ಅಂಚಿನಲ್ಲಿರುವ ಸರ್ಕಾರವನ್ನು ಉಳಿಸುವ ನಿಟ್ಟಿನಲ್ಲಿ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್, ಛತ್ತಿಸಗಢ ಮಾಜಿ ಸಿಎಂ ಭೂಪೇಶ್ ಬಘೇಲ್, ಹರಿಯಾ ಪ್ರತಿಪಕ್ಷ ನಾಯಕ ಭೂಪಿಂದರ್ ಸಿಂಗ್ ಹೂಡಾರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಿಸಿದ್ದು, ಈ ಎಲ್ಲಾ ನಾಯಕರು ಬಂಡಾಯ ಶಾಸಕರೊಂದಿಗೆ ಮಾತುಕತೆ ನಡೆಸಿದ್ಧಾರೆ ಎಂದು ಹೇಳಲಾಗಿದೆ. ಖಾಸಗಿ ಹೋಟೆಲ್ನಲ್ಲಿ ಈ ನಾಯಕರು ಸಮಾಲೋಚನೆ ನಡೆಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರ್ಕಾರ ಉಳಿಯುತ್ತದೆ ಎಂದು ಕಾಂಗ್ರೆಸ್ ಹೈಕಮಾಂಡ್ ವಿಶ್ವಾಸ ವ್ಯಕ್ತಪಡಿಸಿದೆ.