ಕೆಪಿಸಿಸಿ ಹುದ್ದೆ ಅಂಗಡಿ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ; ಸತೀಶ್​ ಜಾರಕಿಹೊಳಿಗೆ DK Shivakumar ಟಾಂಗ್

DK Jarakiholi
Published on

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಸಚಿವ ಸತೀಶ್​ ಜಾರಕಿಹೊಳಿಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಈ ಕುರಿತಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ.

ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ.

DK Shivakumar

ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ. ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ಧಾರೆ.

ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ

ಈ ಪಕ್ಷವನ್ನು ಕೇವಲ ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ. ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ. ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ ಎಂದು ತಾಕೀತು ಮಾಡಿದ್ಧಾರೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ

ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿ ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು. ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net