

ಬೆಂಗಳೂರು: ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ್ ಅತ್ಮಹತ್ಯೆ ಪ್ರಕರಣ ಸದ್ಯ ರಾಜ್ಯ ರಾಜಕೀಯದಲ್ಲಿ ದೊಡ್ಡ ಜಟಾಪಟಿಯನ್ನೇ ಸೃಷ್ಟಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ (BJP) ತೀವ್ರ ಕಿಡಿಕಾರಿದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, "ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ" ಎಂದಿದ್ದಾರೆ.
ಇಂದು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ, "ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿ ಅವರ ವಿರುದ್ಧ ನೇರ ಆರೋಪವಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ ನಮಗೆ ಗೊತ್ತಿದೆ. ಗುತ್ತಿಗೆದಾರನ ಸಾವಿನ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ" ಎಂದರು.
ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಎಂಬುವವರು ನಿಮ್ಮ ಜತೆ, ಸಿಎಂ, ಪ್ರಿಯಾಂಕ ಖರ್ಗೆ ಅವರ ಜತೆ ಇರುವ ಫೋಟೋಗಳನ್ನು ವಿಜಯೇಂದ್ರ ಅವರು ಬಿಡುಗಡೆಗೊಳಿಸಿದ್ದಾರೆ ಎಂದು ಕೇಳಿದಕ್ಕೆ ಉತ್ತರಿಸಿದ ಡಿಸಿಎಂ, "ನನ್ನ ಜೊತೆ ವಿಜಯೇಂದ್ರ, ಯಡಿಯೂರಪ್ಪ ಅವರು ಇರುವ ಫೋಟೋಗಳಿವೆ. ನಮ್ಮ ಮನೆಗೆ ಬಂದವರು, ಮದುವೆ ಕಾರ್ಯಕ್ರಮಕ್ಕೆ ಹೋದಾಗ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ವಿಜಯೇಂದ್ರ, ಯಡಿಯೂರಪ್ಪ ಅವರು ಕ್ರಿಮಿನಲ್, ರೌಡಿಗಳು ಸೇರಿದಂತೆ ಯಾರೆಲ್ಲರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ನಾನು ಬಿಡುಗಡೆ ಮಾಡಲೇ? ಅವರಿಗೆ ಬೇಕು ಎಂದರೆ ಬಿಡುಗಡೆ ಮಾಡುತ್ತೇನೆ. ಆರೋಪಿಗಳು ಹಾಗೂ ನಮ್ಮ ಜತೆ ಮಾತುಕತೆ, ವ್ಯವಹಾರ ನಡೆದಿರುವುದಕ್ಕೆ ದಾಖಲೆಯಿದ್ದರೆ ಆರೋಪ ಮಾಡಲಿ. ನಾವು ಉತ್ತಮವಾಗಿ ಸರ್ಕಾರ ನಡೆಸುತ್ತಿದ್ದು, ವಿರೋಧ ಪಕ್ಷದವರು ಸುಮ್ಮನೆ ಮಾತಾಡಬೇಕು ಎಂಬ ಕಾರಣಕ್ಕೆ ಮಾತನಾಡುತ್ತಾರೆ. ಮಾತಾಡಲಿ ಬಿಡಿ" ಎಂದು ಹೇಳಿದರು.
ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಮುತ್ತಿಗೆ ಹಾಕುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ಮುತ್ತಿಗೆ ಹಾಕಲಿ. ನನ್ನ ಸಹೋದರ ಸುರೇಶ್, ರಾಜರಾಜೇಶ್ವರಿ ನಗರದ ಕೆಲವು ಪ್ರಕರಣಗಳನ್ನು ಪ್ರಸ್ತಾಪಿಸಿದ್ದಾರೆ. ಅವೆಲ್ಲವನ್ನು ಸೇರಿಸಿ ಸಿಬಿಐಗೆ ವಹಿಸೋಣ. ಬಿಜೆಪಿ ಸರ್ಕಾರ ಇದ್ದಾಗ ನನ್ನ ಪ್ರಕರಣವನ್ನು ಮಾತ್ರ ಸಿಬಿಐಗೆ ನೀಡಿದ್ದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಸಾವು, ಸೌಜನ್ಯ ಸಾವು, ಪರೇಶ್ ಮೆಸ್ತಾ ಪ್ರಕರಣ ಸೇರಿದಂತೆ ಸುಮಾರು 12 ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿದ್ದೆವು. ಬಿಜೆಪಿಯವರು ನನ್ನ ಪ್ರಕರಣದ ಜತೆ ಬಿಜೆಪಿ ಸಚಿವರ ಪ್ರಕರಣಗಳನ್ನು ಸಿಬಿಐಗೆ ನೀಡಬೇಕಿತ್ತು. ಯಾಕೆ ನೀಡಲಿಲ್ಲ" ಎಂದು ಪ್ರಶ್ನಿಸಿದರು.
ಬಿಜೆಪಿಯವರು ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುತ್ತಿರುವ ಬಗ್ಗೆ ಮಾತನಾಡಿದ ಡಿಕೆಶಿ, "ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಯಾವ ತಪ್ಪು ಮಾಡಿದ್ದಾರೆ ಎಂದು ರಾಜೀನಾಮೆ ನೀಡಬೇಕು? ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಧ್ವನಿ. ಅವರ ಮೇಲಿನ ಅಸೂಯೆಗೆ ವಿರೋಧ ಪಕ್ಷಗಳು ಈ ರೀತಿ ನಡೆದುಕೊಳ್ಳುತ್ತಿವೆ. ದಲಿತ ಸಮುದಾಯದ ನಾಯಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಐಟಿ-ಬಿಟಿ ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಕೃಷ್ಣ ಅವರ ಸರ್ಕಾರದ ನಂತರ ಐಟಿ-ಬಿಟಿ ಕ್ಷೇತ್ರದಲ್ಲಿ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ. ಹೀಗಾಗಿ ಅವರನ್ನು ಕೆಳಗಿಳಿಸುವ ಸಂಚು ಮಾಡುತ್ತಿದ್ದಾರೆ" ಎಂದರು.