

ಬೆಂಗಳೂರು: ಕರೊನಾ ವೈರಸ್ ಹಾಗೂ ಲಾಕ್ಡೌನ್ ಹಿನ್ನೆಲೆಯಿಂದಾಗಿ ಎರಡು ಬಾರಿ ಮುಂದೂಡಲ್ಪಟ್ಟಿದ್ದ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಅನುಮತಿ ಸಿಕ್ಕಿದೆ.
ಕೋವಿಡ್-19 ಮಾರ್ಗಸೂಚಿಯ ಪ್ರಕಾರ ಜೂನ್ 14 ರಂದು ನಡೆಯಬೇಕಾಗಿದ್ದ ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಣೆ ಮಾಡಲಾಗಿತ್ತು. ಇದೀಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಯಡಿಯೂರಪ್ಪ, ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅಡ್ಡಿ ಮಾಡಿಲ್ಲ. ಕರೊನಾ ವೈರಸ್ ಹಿನ್ನೆಲೆಯಲ್ಲಿ ಪದಗ್ರಹಣಕ್ಕೆ ನಿರಾಕರಿಸಲಾಗಿತ್ತು ಎಂದಿದ್ದಾರೆ.
ಇದೀಗ ಪದಗ್ರಹಣ ಕಾರ್ಯಕ್ರಮಕ್ಕೆ ಷರತ್ತು ವಿಧಿಸಿರುವ ಅವರು, ಲಾಕ್ಡೌನ್ ಮಾರ್ಗಸೂಚಿ ಅನ್ವಯ ಹೆಚ್ಚು ಜನ ಸೇರಿಸದೆ ಕಾರ್ಯಕ್ರಮ ಆಯೋಜಿಸಲು ಯಾವುದೇ ತೊಂದರೆಯಿಲ್ಲ. ಜನಸಂದಣಿಯಾಗದಂತೆ ಎಚ್ಚರ ವಹಿಸಿ ಅವರು ಕಾರ್ಯಕ್ರಮ ಮಾಡಬೇಕು. ಈ ಬಗ್ಗೆ ಶಿವಕುಮಾರ್ ಜತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ಪದಗ್ರಹಣ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದಿದ್ದಾರೆ.
ಈ ಬಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಖುಷಿ ಹಂಚಿಕೊಂಡಿರುವ ಡಿ.ಕೆ.ಶಿವಕುಮಾರ್, 'ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಕರ್ನಾಟಕದ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಪಕ್ಷದ ಮುಖಂಡರ ಜತೆ ಚರ್ಚೆ ಮಾಡಿದ ನಂತರ ಹೊಸ ದಿನಾಂಕವನ್ನು ನಿಗದಿ ಪಡಿಸಲಾಗುವುದು' ಎಂದಿದ್ದಾರೆ.
ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಎರಡು ಬಾರಿ ಅನುಮತಿಯನ್ನು ನಿರಾಕರಣೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜೂನ್ 14 ರಂದು ಪದಗ್ರಹಣ ಕಾರ್ಯಕ್ರಮ ನಡೆಸಲು ಡಿಕೆಶಿ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಸರ್ಕಾರ ಇದಕ್ಕೆ ಅನುಮತಿ ನೀಡಿರಲಿಲ್ಲ. ಇದು ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಕಾನೂನು ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಲಾಗಿತ್ತು.