

ನವದೆಹಲಿ: ಮಾನ್ಯತಾ ಟೆಕ್‌ಪಾಕ್ ಬಳಿ ರಾಜಕಾಲುವೆ ಒತ್ತುವರಿ ತೆರವುಮಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಧಮ್ಮು, ತಾಕತ್ತು ಇದೆಯೇ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಮಾನ್ಯತಾ ಟೆಕ್‌ಪಾರ್ಕ್ ಬಳಿಗೆ ಶಿವಕುಮಾರ್ ಅವರೇ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಅದು ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೇ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ! ಕೊನೇಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಕಾಲೆಳೆದಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರ್ಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ. ಈ ಅಸಡ್ಡೆ ಯಾಕೆ ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ