

ಕೋಲಾರ: ರಾಜ್ಯದಲ್ಲಿ ಎಚ್ಎಂಪಿವಿ ವೈರಸ್ ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಚ್.ಎಂ.ಪಿ.ವಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ವಯ ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್ನಿಂದ ಮುಚ್ಚಿಕೊಳ್ಳಬೇಕು. ಕೈಗಳನ್ನು ಅಗಾಗ ಸಾಬೂನು ಅಥವಾ ಸ್ಯಾನಿಟೈಸರ್ನಿಂದ ತೊಳೆದು ಕೊಳ್ಳಬೇಕು. ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು. ಬಳಸಿದ ಟಿಶ್ಯೂ, ಕರವಸ್ತ್ರ್ರವನ್ನು ಪುನ@ ಬಳಕೆ ಮಾಡಬಾರದು ಎಂದರು.
ಮಕ್ಕಳಲ್ಲಿ ಬಾಧೆ ಹೆಚ್ಚು
ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಎಚ್.ಎಂ.ಪಿ.ವಿ ಸೋಂಕು ಹೆಚ್ಚಾಗಿ ಕಂಡು ಬರುವ ಸಾಧ್ಯತೆಯಿರುವುದರಿಂದ ಶೀತ, ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ವೈದ್ಯರ ಬಳಿ ಕರೆದೊಯ್ದು ಸಕಾಲದಲ್ಲಿ ಚಿಕಿತ್ಸೆ ಕೊಡಿಸಬೇಕು. ರೋಗ ಲಕ್ಷಣಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸದೆ ಮನೆಯಲ್ಲೇ ಆರೈಕೆ ಮಾಡುವ ಬಗ್ಗೆ ಪಾಲಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಹಾಗೂ ಶಾಲಾಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ಮುಂಜಾಗ್ರತಾಕ್ರಮವಾಗಿ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ, ಶಾಲಾ ಆವರಣಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡು, ಪ್ರಮುಖ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ಗಳನ್ನು ಮೀಸಲಿಡಬೇಕು. ಅಗತ್ಯ ಪರೀಕ್ಷಾ ಪರಿಕರಗಳನ್ನು ಖರೀದಿಸಿ ದಾಸ್ತಾನು ಮಾಡಬೇಕು ಎಂದು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ಇಬ್ಬರಲ್ಲಿ ದೃಢ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ಎಚ್ಎಂಪಿವಿ ರೋಗವು ಸಾಮಾನ್ಯವಾದ ಕೆಮ್ಮು, ಶೀತಜ್ವರ, ಮೂಗು ಸೋರುವುದು, ತಲೆ ನೋವಿನಂತಹ ಲಕ್ಷಣ ಹೊಂದಿದ್ದು, ವಿಶೇಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಲ್ಲಿ ಬಾಧೆ ಹೆಚ್ಚಾಗಿ ಕಂಡು ಬರುತ್ತದೆ. ರಾಜ್ಯದಲ್ಲಿ ಈವರೆಗೆ ಇಬ್ಬರಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ ಒಂದು ಪ್ರಕರಣದಲ್ಲಿ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಎಚ್ಎಂಪಿವಿ ವೈರಸ್ನಿಂದ ಕೆಮ್ಮು, ಜ್ವರ, ಉಸಿರಾಟದ ತೊಂದರೆ ಸೇರಿ ಜ್ವರದ ಲಕ್ಷಣಗಳು ಉಂಟಾಗುತ್ತವೆ. ತೀವ್ರ ಪ್ರಕರಣಗಳಲ್ಲಿ ಬ್ರಾಂಕೈಟೀಸ್ ಅಥವಾ ನ್ಯೂಮೋನಿಯಾಕ್ಕೆ ಕಾರಣವಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು ಸೇರಿ ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವ ವ್ಯಕ್ತಿಗಳಲ್ಲಿ ಸೋಂಕು ಹೆಚ್ಚಾಗಿ ಕಂಡು ಬರುತ್ತದೆ. ಎಚ್.ಎಂ.ಪಿ.ವಿ ಸೋಂಕಿನ ಬಗ್ಗೆ ಸಾರ್ವಜನಿಕರು ಯಾವುದೇ ಭಯ ಮತ್ತು ಆತಂಕ ಪಡುವ ಅಗತ್ಯವಿಲ್ಲ. ಸಕಾಲಕ್ಕೆ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಪ್ರವಿಣ್ ಬಾಗೇವಾಡಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಜಗದೀಶ್, ಜಿಲ್ಲಾ ಮುಖ್ಯ ಶಸ್ತ್ರಚಿಕಿತ್ಸಕಿ ಡಾ.ಮಮತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ಪಿಯು ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಕೃಷ್ಣ ಇದ್ದರು.