

ಬೆಂಗಳೂರು: ರಾಜ್ಯ ಪಠ್ಯಕ್ರಮದಲ್ಲಿ ಕೆಲ ಅಧ್ಯಾಯ ಗಳನ್ನು ಕೈಬಿಟ್ಟ ವಿಚಾರ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಶಿಕ್ಷಣ ಇಲಾಖೆ ಪಠ್ಯ ಕಡಿತ ಮಾಡುವ ಕಾರ್ಯವನ್ನು ಸ್ಥಗಿತಗೊಳಿಸಿದೆ.
ಕರೊನಾ ಹಿನ್ನೆಲೆಯಲ್ಲಿ ಈವರೆಗೆ ಶೈಕ್ಷಣಿಕ ಚಟುವಟಿಕೆ ಆರಂಭ ಗೊಂಡಿಲ್ಲ. ಯಾವಾಗ ಆರಂಭಗೊಳ್ಳುತ್ತವೆಂಬ ಬಗ್ಗೆಯೂ ಸ್ಪಷ್ಟತೆಯಿಲ್ಲ. ಈ ಹಿನ್ನೆಲೆಯಲ್ಲಿ 120 ದಿನಗಳ ಅವಧಿಗೆ ಲೆಕ್ಕಹಾಕಿ ಪಠ್ಯಪುಸ್ತಕದಲ್ಲಿ ಕೆಲವು ಅಧ್ಯಾಯಗಳನ್ನು ಕಡಿತ ಮಾಡಿ ಕರ್ನಾಟಕ ಪಠ್ಯಪುಸ್ತಕ ಸಂಘ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿತ್ತು. ಇದರಲ್ಲಿ ಪ್ರಮುಖವಾಗಿ ಹೈದರಾಲಿ, ಟಿಪ್ಪು ಸುಲ್ತಾನ್, ಪ್ರವಾದಿ ಮೊಹಮ್ಮದ್, ಜೀಸಸ್, ರಾಣಿ ಅಬ್ಬಕ್ಕ ಹಾಗೂ ಸಂವಿಧಾನದ ಕುರಿತ ಪಾಠಗಳನ್ನು ಕೈಬಿಟ್ಟಿತ್ತು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟಗೊಂಡು ವಿವಾದಕ್ಕೆ ಗುರಿಯಾಗಿದ್ದರಿಂದ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಪಠ್ಯ ಕಡಿತ ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದೆ.
ಈ ಕುರಿತು ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, ಕರೊನಾ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ 1ರಿಂದ 10ನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ. ಈ ಶೈಕ್ಷಣಿಕ ವರ್ಷ ಪ್ರಾರಂಭವಾಗದಿರುವುದರಿಂದ ನಮಗೆ ಎಷ್ಟು ದಿನಗಳು ದೊರೆಯುತ್ತದೆ ಎಂಬುದು ಅಸ್ಪಷ್ಟವಾಗಿರುವುದರಿಂದ ಪಠ್ಯಕ್ರಮ ಅಂತಿಮಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಲಭ್ಯ ಅವಧಿಯ ಆಧಾರದ ಮೇಲೆ ಮಾಡಲಾಗುವ ಪಠ್ಯ ಕಡಿತವು ವೈಜ್ಞಾನಿಕವಾಗಿರಲಿದ್ದು, ಯಾವುದೇ ಪಠ್ಯವನ್ನು ಅನಗತ್ಯವಾಗಿ ಕಡಿತ ಮಾಡುವುದಿಲ್ಲ. ಹಾಗಾಗಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲ ಎಂದು ಸ್ಪಷ್ಟಪಡಿಸಿದರು.
ಹೋರಾಟ ಅನಿವಾರ್ಯ: ಕರೊನಾ ನಿಯಂತ್ರಿಸಲಾಗದ ರಾಜ್ಯ ಸರ್ಕಾರ, ಸದ್ಯದ ಪರಿಸ್ಥಿತಿ ದುರ್ಬಳಕೆ ಮಾಡಿಕೊಂಡು ಪಠ್ಯಪುಸ್ತಕಗಳನ್ನು ಕೇಸರೀಕರಣ ಗೊಳಿಸಿ ಗುಪ್ತ ಅಜೆಂಡಾ ಅನುಷ್ಠಾನ ಗೊಳಿಸಲು ಹೊರಟಿದೆ. ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಈ ಹುನ್ನಾರವನ್ನು ಕಾಂಗ್ರೆಸ್ ಸಹಿಸುವುದಿಲ್ಲ. ಇದರ ವಿರುದ್ಧ ಹೋರಾಟ ಅನಿವಾರ್ಯ ವಾಗಬಹುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ, ದಾಖಲೆ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಃ ಕೆಡಹುವ ಕೆಲಸ ಮಾಡಲ್ಲ. | ಎಸ್.ಸುರೇಶ್ ಕುಮಾರ್ ಶಿಕ್ಷಣ ಸಚಿವ