

ಕಡೂರು: ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದೇವೆ ಎಂಬ ಕೀಳರಿಮೆ ತೊರೆದು ಉತ್ತಮ ವ್ಯಾಸಂಗ ಮಾಡುವತ್ತ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಸೋಮವಾರ ವಿವೇಕ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿದವರು ಕೂಡ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇಸ್ರೋದಂತಹ ದೊಡ್ಡ ಸಂಸ್ಥೆಗಳಲ್ಲಿ ವಿಜ್ಞಾನಿಗಳಾಗಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ ಎಂದರು.
ಸರ್ಕಾರಿ ಶಾಲೆಗಳಲ್ಲೂ ಉತ್ತಮ ಶಿಕ್ಷಣ ದೊರೆಯುತ್ತದೆ. ಕೆಲವು ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಾಲೆಗೆ ಹೆಚ್ಚುವರಿ ವಿವೇಕಾ ಶಾಲಾ ಕೊಠಡಿಗಳನ್ನು ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ದಾಸೋಹ ಕೊಠಡಿ ನಿರ್ಮಾಣಕ್ಕೆ ಅನುದಾನ ನೀಡುವ ಭರವಸೆ ನೀಡಿದರು.
ಪುರಸಭೆ ಸದಸ್ಯ ಭಂಡಾರಿ ಶ್ರೀನಿವಾಸ್ ಮಾತನಾಡಿ, ಎಲ್ಲ ಮಕ್ಕಳಲ್ಲೂ ಅಗಾಧ ಪ್ರತಿಭೆ ಅಡಗಿರುತ್ತದೆ. ಉತ್ತಮ ಶಿಕ್ಷಣ ದೊರೆತಾಗ ಅದು ಬೆಳಕಿಗೆ ಬರುತ್ತದೆ. ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿದೆ. ಶಾಲೆಗೆ ಪುರಸಭೆಯಿಂದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ವಿಜಯ ಕುಮಾರ್, ಸದಸ್ಯ ೈಯಾಝ್, ಡಿಶ್ ಮಂಜುನಾಥ್ ಹಾಗೂ ಶಿಕ್ಷಕರು ಇದ್ದರು.