

ರಾಮನಗರ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ವಿವಿಧ ಅಭಿವೃದ್ಧಿ ಇಲಾಖೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಬುಧವಾರ ಜಿಲ್ಲಾ ಮಟ್ಟದ ‘ಕ್ಷಯರೋಗ’ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್, ಜಾಗೃತಿ ಜಾಥಾ ಮೂಲಕ ಕ್ಷಯರೋಗದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರು ಕ್ಷಯರೋಗ ನಿಯಂತ್ರಿಸಲು ಸಹಕರಿಸಬೇಕು. ಇದರಿಂದ ರಾಮನಗರವನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಸಾಧ್ಯ ಎಂದರು.
ಕರಪತ್ರಗಳನ್ನು ಬಿಡುಗಡೆ ಮಾಡಿದ ಮಾತನಾಡಿದ ಡಿಎಲ್‌ಒ ಡಾ. ಮಂಜುನಾಥ್, ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಮೂಲಕ ಅರಿವು ಮೂಡಿಸಲಾಗುತ್ತಿದೆ. ಸಮುದಾಯದಲ್ಲಿ ಕ್ಷಯರೋಗದ ಲಕ್ಷಣಗಳು, ಹರಡುವಿಕೆ, ಚಿಕಿತ್ಸೆ ಮತ್ತು ನಿಯಂತ್ರಣ ಕುರಿತು ಮಾಹಿತಿ ನೀಡಲಾಗುತ್ತದೆ. ಸಾರ್ವಜನಿಕರು ಕ್ಷಯರೋಗ ಮುಕ್ತ ಸಮಾಜ ನಿರ್ಮಿಸಲು ಸಹಕರಿಸುವಂತೆ ತಿಳಿಸಿದರು.
ಪ್ರಾಂಶುಪಾಲರಾದ ಹರಿಣಾಕ್ಷಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್ ಗಂಗಾಧರ್, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ರವಿ ಕುಮಾರ್, ಡಿಟಿಒ ಕಚೇರಿ ಸಿಬ್ಬಂದಿ, ಜಿಲ್ಲಾ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಇದ್ದರು.