ಶೀಘ್ರ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಶೀಘ್ರ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Published on

ಸಾಲಿಗ್ರಾಮ: ಸಾಲಿಗ್ರಾಮ ಮತ್ತು ಕೆ.ಆರ್.ನಗರ ಅವಳಿ ತಾಲೂಕಿನಲ್ಲಿ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದು, ಸದ್ಯದಲ್ಲೇ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಡಿ. ರವಿಶಂಕರ್ ತಿಳಿಸಿದರು.

ತಾಲೂಕಿನ ಬಳ್ಳೂರು ಅಣೆಕಟ್ಟೆಯಿಂದ ಚಾಮರಾಜ ಮತ್ತು ರಾಮಸಮುದ್ರ ಎಡ ಮತ್ತು ಬಲದಂಡೆ ಹಾಗೂ ಮಿರ್ಲೆ ಶ್ರೇಣಿಯ ನಾಲೆಗಳಿಗೆ ನೀರು ಬಿಡುವ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ರೈತರ ಬೆಳೆಗೆ ಸಂಪೂರ್ಣ ನೀರು ಒದಗಿಸುವ ಜವಾಬ್ದಾರಿ ನೀರಾವರಿ ಇಲಾಖೆ ಅಧಿಕಾರಿಗಳದ್ದು, ಕೊನೆಯ ಭಾಗದವರೆಗೆ ನೀರು ತಲುಪದೇ ಬೆಳೆ ನಷ್ಟವಾದರೆ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಶಾಸಕರು ಎಚ್ಚರಿಕೆ ನೀಡಿದರು.

ಮೊದಲ ಹಂತದಲ್ಲಿ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಮಾಡಲಾಗುತ್ತದೆ. ನಂತರ ರೈತರು ಬೆಳೆಯುವ ಬೆಳೆಗಳಿಗೆ ನೀರಿನ ಸೌಲಭ್ಯ ಒದಗಿಸಲಾಗುತ್ತದೆ. ರೈತರು ಕೆರೆಕಟ್ಟೆಗಳು ತುಂಬುವವರೆಗೆ ಕಾಯ್ದು ನಂತರ ತಮ್ಮ ಕೃಷಿ ಚಟುವಟಿಕೆಗಳಿಗೆ ನೀರು ಬಳಕೆಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ರೈತರ ಸಮಸ್ಯೆಗಳಿಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ರೈತರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ಕೆಲಸ ಮಾಡಬೇಕು. ಪ್ರತಿಯೊಬ್ಬ ಅಧಿಕಾರಿ ಕೂಡ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡಿ, ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ರೈತರು ಆತಂಕಕ್ಕೆ ಒಳಗಾಗದೆ ಕೃಷಿ ಚಟುವಟಿಕೆ ಹಾಗೂ ಬಿತ್ತನೆ ಕಾರ್ಯ ಆರಂಭಿಸಬೇಕು ಎಂದು ಸಲಹೆ ನೀಡಿದರು.

ಕೃಷಿ ಚಟುವಟಿಕೆ ಸಂಬಂಧಿಸಿದ ಪರಿಕರಗಳು, ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಕಾಲದಲ್ಲಿ ರೈತರಿಗೆ ಒದಗಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹದೇವ್, ಉದಯ್, ನಗರಾಧ್ಯಕ್ಷ ಎಂ.ಜಿ.ರಮೇಶ್, ಪ್ರಭಾಕರ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಸೈಯದ್ ಶೌಕತ್, ಎಸ್ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ಗ್ರಾ.ಪಂ.ಅಧ್ಯಕ್ಷೆ ಮಣಿಲಾ, ತಾ.ಪಂ. ಮಾಜಿ ಅಧ್ಯಕ್ಷ ಎಚ್.ಟಿ.ಮಂಜಪ್ಪ, ಮಾಜಿ ಸದಸ್ಯ ಸಣ್ಣಪ್ಪ, ಪುರಸಭೆ ಮಾಜಿ ಅಧ್ಯಕ್ಷ ಕೋಳಿ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ಹೇಮಂತ್, ಬಲರಾಮೇಗೌಡ, ಗುಣಪಾಲ್ ಜೈನ್, ಕಲ್ಲಹಳ್ಳಿ ಶ್ರೀನಿವಾಸ್, ಮಹದೇವನಾಯಕ, ತೋಟಪ್ಪನಾಯಕ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net