ಮುಳುಗಡೆ ಸಂತ್ರಸ್ತರ ಪರಿಹಾರಕ್ಕಾಗಿ ಕಾರ್ಯಪಡೆ: ಮಧು ಬಂಗಾರಪ್ಪ

independence day
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಸಚಿವ ಮಧು ಬಂಗಾರಪ್ಪ ಗೌರವ ವಂದನೆ ಸ್ವೀಕರಿಸಿದರು.
Published on

ಶಿವಮೊಗ್ಗ: ಶರಾವತಿ ಹಾಗೂ ಇತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳಲಾಗುತ್ತಿದೆ. ಜಿಲ್ಲೆ ಮತ್ತು ಸರ್ಕಾರದ ಹಂತದಲ್ಲಿ ಸಭೆಗಳನ್ನು ನಡೆಸಲಾಗಿದೆ. ಸಿಎಂ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಶಾಶ್ವತ ಕಾರ್ಯಪಡೆ ರಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾಡಳಿತದಿಂದ 78ನೇ ಸ್ವಾತಂತ್ರೃಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈಗಾಗಲೇ ಶರಾವತಿ ಮುಳುಗಡೆ ಸಂತ್ರಸ್ತರ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ಹಿರಿಯ ವಕೀಲರೊಬ್ಬರನ್ನು ನೇಮಿಸಲಾಗಿದೆ. ವಿಧಾನಸಭೆಯ ಐತಿಹಾಸಿಕ ನಿರ್ಣಯದ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.
ಹಲವು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಮನೆಕಟ್ಟಿಕೊಂಡಿರುವ ವನವಾಸಿಗಳನ್ನು ಒಕ್ಕಲೆಬ್ಬಿಸದಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಶರಾವತಿ ನದಿಯಿಂದ ಸೊರಬ, ಆನವಟ್ಟಿ ಮತ್ತು ಶಿರಾಳಕೊಪ್ಪ ಪಟ್ಟಣಗಳು ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಶಾಶ್ವತ ಶುದ್ಧ ಕುಡಿಯುವ ನೀರಿನ ಯೋಜನೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಜಿಲ್ಲೆಯ ವಿಕಾಸಕ್ಕೆ ಹೆಚ್ಚಿನ ಗಮನ ಹರಿಸಲಾಗುವುದು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮ ವೀರಸೇನಾನಿಗಳ ಆಶಯದಂತೆ ಸಾಮಾಜಿಕವಾಗಿ ಹಿಂದುಳಿದ ಹಾಗೂ ಕೆಳ ವರ್ಗಗಳು ಸೇರಿ ಎಲ್ಲ ಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಮೂಲಕ ಸಾಮಾಜಿಕ ನ್ಯಾಯ ಎತ್ತಿಹಿಡಿಯಲಾಗುವುದು ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿಗಳಾದ ಡಿ.ಎಸ್.ಅರುಣ್, ಬಲ್ಕೀಶ್ ಬಾನು, ಡಾ. ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್‌ಪಿ ಮಿಥುನ್‌ಕುಮಾರ್, ಜಿಪಂ ಸಿಇಒ ಎನ್.ಹೇಮಂತ್ ಇತರರು ಉಪಸ್ಥಿತರಿದ್ದರು.

ಸನ್ಮಾನ, ಬಹುಮಾನ
ಉತ್ತಮ ಸೇವೆ ಸಲ್ಲಿಸಿದ ಐವರು ಅಧಿಕಾರಿ ಮತ್ತು ಸಿಬ್ಬಂದಿ, ಅಲ್ಪಸಂಖ್ಯಾತ ಇಲಾಖೆಯಡಿ ಬರುವ ಪ್ರೌಢಶಾಲೆಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಅಂಗಾಂಗ ದಾನ ಮಾಡಿ ಹಲವರ ಪ್ರಾಣ ಉಳಿಸಿದ ಆರ್.ಉಲ್ಲಾಸ್ ಮತ್ತು ಲಲಿತಮ್ಮ ಅವರ ಕುಟುಂಬಸ್ಥರನ್ನು ಸನ್ಮಾನಿಸಲಾಯಿತು. ವಿವಿಧ ತುಕಡಿಗಳು ಆಕರ್ಷಕ ಪಥಸಂಚನ ನಡೆಸಿದವು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಪಥಸಂಚಲನದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಥಮ, ಭಾರತ್ ಸ್ಕೌಟ್ಸ್ ಬಾಲಕರ ಶಾಲೆ ದ್ವಿತೀಯ ಹಾಗೂ ಜ್ಞಾನದೀಪ ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net