

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮ ಸೈಟ್ ಹಂಚಿಕೆ ಪ್ರಕರಣದ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಇದೀಗ ವಿಧಾನಸೌಧ ತಲುಪಿದೆ.
ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಇಲ್ಲಿಯವರೆಗೂ ಮುಡಾದ ಮಾಜಿ, ಹಾಲಿ ಅಧಿಕಾರಿಗಳು, ಭೂ ವಾರಸುದಾರರ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಇದೀಗ ಐಎಎಸ್ ಅಧಿಕಾರಿಗಳ ವಿಚಾರಣೆಗೆ ಮುಂದಾಗಿರುವುದು ಕುತೂಹಲ ಕೆರಳಿಸಿದೆ.
ಕೆಲ ದಿನಗಳ ಹಿಂದೆ ಮುಡಾದ ಮಾಜಿ ಆಯುಕ್ತ ನಟೇಶ್ ಅವರನ್ನು ವಿಚಾರಣೆ ನಡೆಸಲಾಗಿತ್ತು. ಮುಡಾವು ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ವಿಧಾನಸೌಧದಲ್ಲಿ ಇರುವ ನಗರಾಭಿವೃದ್ಧಿ ಇಲಾಖೆ ಕಚೇರಿಗೆ ನೋಟಿಸ್ ಅಂಟಿಸಲಾಗಿದೆ.
ಮುಂದುವರಿದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್‌ಗೂ ನೋಟಿಸ್ ಜಾರಿ ಮಾಡಿದರೆ ಆಶ್ಚರ್ಯ ಪಡುವಂತಿಲ್ಲ. ಹಗರಣ ಬೆಳಕಿಗೆ ಬರುತ್ತಿದಂತೆ ಮುಡಾ ಕಚೇರಿಗೆ ಸಚಿವ ಸುರೇಶ್ ಭೇಟಿ ಕೊಟ್ಟು ಕೆಲ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಮತ್ತು ಇಡಿ ಅಧಿಕಾರಿಗಳಿಗೆ ಮೂಲ ದಾಖಲೆಗಳು ಪತ್ತೆಯಾಗದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.
ಇವರಲ್ಲದೆ, ಪ್ರಕರಣದಲ್ಲಿ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಮತ್ತು ಅವರಪತ್ನಿ ಪಾರ್ವತಿ ಅವರಿಗೂ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವುದನ್ನು ತಳ್ಳಿ ಹಾಕುವಂತಿಲ್ಲ. ಈಗಾಗಲೇ 3ನೇ ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನು ಮಾಲೀಕ ದೇವರಾಜು ವಿಚಾರಣೆ ನಡೆಸಲಾಗಿದೆ.