

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಜರುಗಿದೆ. ಜನರ ಸಮಸ್ಯೆಗಳನ್ನು ಆಲಿಸುವ ಮೂಲಕ ಅವುಗಳಿಗೆ ಪರಿಹಾರ ಒದಗಿಸಲು ಯತ್ನಿಸುವ ಜನತಾದರ್ಶನವು ಪರಿಕಲ್ಪನೆಯ ದೃಷ್ಟಿಯಿಂದ ಉತ್ತಮ ಕಾರ್ಯಕ್ರಮವಾಗಿದೆ. ಆದರೆ, ವಾಸ್ತವದಲ್ಲಿ ಸಮಸ್ಯೆಗಳನ್ನು ನಿವಾರಿಸಿ ಪರಿಹಾರವನ್ನು ಒದಗಿಸುವಲ್ಲಿ ಎಷ್ಟರ ಮಟ್ಟಿಗೆ ಸಫಲವಾಗುತ್ತದೆ ಎಂಬುದಕ್ಕೆ ಉತ್ತರ ಸುಲಭವಲ್ಲ. ಆದರೂ, ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಅನುಸರಣೆಯ ವ್ಯವಸ್ಥೆಯೊಂದಿಗೆ ಈ ಬಾರಿಯ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಿರುವುದು ಉತ್ತಮ ನಡೆ ಎನ್ನಬಹುದಾಗಿದೆ. ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳನ್ನು ಒಳಗೊಂಡ ಸರ್ಕಾರಿ ವ್ಯವಸ್ಥೆಯು ಪ್ರತಿನಿತ್ಯವೂ ಸೂಕ್ತವಾಗಿ ಕಾರ್ಯನಿರ್ವಹಿಸಿದರೆ ಜನತಾದರ್ಶನ ಅಗತ್ಯವೇ? ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ. ಈ ಹಿನ್ನೆಲೆಯಲ್ಲಿಯೇ ಸರ್ಕಾರಿ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದರೆ ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೂ ತಮ್ಮ ಬಳಿ ಬರುವ ಅಗತ್ಯವೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಕೆಲ ದಿನಗಳ ಹಿಂದೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾರ್ವಿುಕವಾಗಿ ಹೇಳಿದ್ದು, ಜನತಾ ದರ್ಶನ ನಡೆಸುವ ಸೂಚನೆಯನ್ನೂ ನೀಡಿದ್ದಾರೆ. ಇದರನುಸಾರವಾಗಿ, ಪ್ರತಿಯೊಂದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಸದುದ್ದೇಶದೊಂದಿಗೆ ಜನತಾದರ್ಶನ ಆರಂಭವಾಗಿದೆ.
ಸಾರ್ವಜನಿಕರ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸಲು ಆದ್ಯತೆಯನ್ನು ಈ ಕಾರ್ಯಕ್ರಮದಲ್ಲಿ ನೀಡಿರುವುದು ಸೂಕ್ತ ಕ್ರಮವಾಗಿದೆ. ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಿಸಲಾಗುತ್ತದೆ. ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಗೆ ಅರ್ಜಿಗಳನ್ನು ಕಳುಹಿಸಲಾಗುತ್ತದೆ. ಈ ಅರ್ಜಿಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕೆಂಬ ಸೂಚನೆಯನ್ನು ನೀಡಲಾಗಿದೆ. ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ನಂತರ ಪ್ರತಿ 15 ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದೊಂದು ತಾಲೂಕಿನಲ್ಲಿ ತಾಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕಾಗಿದೆ. ಈ ರೀತಿಯ ಅನುಸರಣೆ ಕಾರ್ಯಕ್ರಮ ರೂಪಿಸಿರುವುದು ಅರ್ಜಿಗಳ ವಿಲೇವಾರಿ, ಸಮಸ್ಯೆ ಪರಿಹರಿಸುವಲ್ಲಿ ಸಾಕಷ್ಟು ಫಲ ನೀಡಬಹುದಾದ ಕ್ರಮ ಎನ್ನಬಹುದು. ಜನತಾದರ್ಶನದ ತಯಾರಿಗಾಗಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಯು ಅನೇಕ ದಿನಗಳಿಂದ ತೊಡಗಿದ್ದಾರೆ. ಇದಕ್ಕಾಗಿ ದಿನನಿತ್ಯದ ಕಾರ್ಯಗಳನ್ನು ಮುಂದೂಡಿದ್ದಾರೆ. ಇದು ಸಾರ್ವಜನಿಕರ ಕೆಲಸಗಳಿಗೆ ವಿಳಂಬಕ್ಕೆ ಕಾರಣವಾಗುತ್ತಿದ್ದು, ಮತ್ತಷ್ಟು ಕುಂದುಕೊರತೆಗಳು ಉದ್ಭವಿಸಲು ಇದು ಕಾರಣವಾಗದಂತೆ ಎಚ್ಚರ ವಹಿಸಬೇಕಾಗಿದೆ.
ವಿಜಯವಾಣಿ ಪತ್ರಿಕೆ ಕೂಡ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಸಮಸ್ಯೆಗಳನ್ನು ನಿವಾರಿಸುವಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳು- ಜನಪ್ರತಿನಿಧಿಗಳ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಿದೆ. ಪತ್ರಿಕೆಯ ಈ ಕಾರ್ಯಕ್ರಮವು ಸಾಕಷ್ಟು ಫಲಪ್ರದವಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆಗೂ ಪಾತ್ರವಾಗಿದೆ. ಈ ಹಿಂದಿನ ಸರ್ಕಾರಗಳ ಅವಧಿಯಲ್ಲೂ ಜನತಾದರ್ಶನ ಮಾದರಿಯ ಕಾರ್ಯಕ್ರಮಗಳು ಸಾಕಷ್ಟು ನಡೆದಿವೆ. ಸಾರ್ವಜನಿಕರ ಸಮಸ್ಯೆ ಆಲಿಕೆಗೆ ನಿರಂತರ ಕಾರ್ಯಕ್ರಮ ರೂಪಿಸಿ, ಕಾಲಮಿತಿಯಲ್ಲಿ ಪರಿಹಾರಗಳನ್ನು ಒದಗಿಸಿದಾಗ ಮಾತ್ರ ಜನತಾದರ್ಶನ ಸಾರ್ಥಕಗೊಳ್ಳುತ್ತದೆ.