

ಸಿಂಧನೂರು: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಡಾ.ಅಂಬೇಡ್ಕರ್ ವಸತಿ ನಿಲಯ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.
ಸರ್ಕಾರ ಎರಡು ವರ್ಷದ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿದೆ. ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದೆ. ತಾಲೂಕು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸುತ್ತಿದೆ. ಅಕ್ಷರ ಆವಿಷ್ಕಾರ ಯೋಜನೆಯಡಿ 5 ಸಾವಿರ ಕೋಟಿ ರೂ. ನೀಡಲಾಗಿದೆ. ಶೇ.25 ಅಕ್ಷರ ಆವಿಷ್ಕಾರ ಹಾಗೂ ಶೇ.25 ಆರೋಗ್ಯಕ್ಕೆ ನೀಡಲಾಗಿದೆ. ತಾಲೂಕಿನಲ್ಲಿ 135 ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿವೆ.
ಅನುದಾನ ಹಂಚಿಕೆ ಮಾಡಲಾಗಿದ್ದು, 8 ಹೊಸ ಪ್ರೌಢ ಶಾಲಾ ಕಟ್ಟಡ ನಿರ್ಮಿಸಲಾಗಿದೆ. 6 ಹೊಸ ವಸತಿ ನಿಲಯ, ಎರಡು ಕೋಟಿ ರೂ. ವೆಚ್ಚದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ತೆರೆಯಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಎಂಎಲ್ಸಿ ಬಸನಗೌಡ ಬಾದರ್ಲಿ ಮಾತನಾಡಿ, ವಿದ್ಯಾರ್ಥಿ ಜೀವನ ಕಷ್ಟದ್ದಾಗಿದ್ದು ಬಡತನದಲ್ಲಿ ಓದಿದರೂ, ಮುಂದೆ ಉದ್ಯೋಗದ ಸಮಸ್ಯೆ ಆಗುತ್ತಿತ್ತು. ನಮ್ಮ ಸರ್ಕಾರ ಅವರಿಗಾಗಿ ಯುವನಿಧಿ ಆರಂಭಿಸಿದೆ. ಸರ್ಕಾರ ವಸತಿ ಸೇರಿ ಗುಣಮಟ್ಟದ ಶಿಕ್ಷಣ ನೀಡಲು ಯೋಜನೆ ರೂಪಿಸಿದೆ. ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೂ ಆದ್ಯತೆ ನೀಡಿದೆ ಎಂದರು.
ನಗರಸಭೆ ಸದಸ್ಯೆ ಲಕ್ಷ್ಮೀ ಭಂಗಿ, ಪ್ರಮುಖರಾದ ವೆಂಕಟೇಶ ಬಂಡಿ, ಛತ್ರಪ್ಪ ಕುರುಕುಂದಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಖಾಜಿ ಮಲ್ಲಿಕ್ ವಕೀಲ ಇದ್ದರು. ಶಿಕ್ಷಕ ವೀರೇಶ ಗೋನ್ವಾರ ನಿರೂಪಿಸಿದರು.