ಈ ವರ್ಷದಿಂದಲೇ ಶಿಕ್ಷಣ ನೀತಿ : ಶಾಲಾ ಕಾಲೇಜು ಉನ್ನತಿಗೆ ಎಲ್ಲ ಕ್ರಮ ಎಂದ ಡಿಸಿಎಂ ಅಶ್ವತ್ಥನಾರಾಯಣ

08-04-rama-school
Published on

ರಾಮನಗರ : ಶಿಕ್ಷಣದಿಂದಲೇ ಉನ್ನತಿ ಸಾಧ್ಯ ಎಂಬುದನ್ನು ಅರಿತಿರುವ ಸರ್ಕಾರ ಸರ್ಕಾರಿ ಶಾಲೆ- ಕಾಲೇಜುಗಳನ್ನು ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಲು ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅದೆಲ್ಲವನ್ನೂ ಮಾಡುತ್ತಿದೆ. ಜತೆಗೆ ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನೂ ಜಾರಿ ಮಾಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಜಿಲ್ಲಾ ಕೇಂದ್ರದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಮರು ನಿರ್ಮಾಣ ಮಾಡಿರುವ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಹಾಗೂ ಸರ್ಕಾರದ ಅನುದಾನದಲ್ಲಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ರಾಜ್ಯವು ಶೈಕ್ಷಣಿಕವಾಗಿ ಉತ್ತಮ ವಾತಾವರಣ ಹೊಂದಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಇಡೀ ಶೈಕ್ಷಣಿಕ ವ್ಯವಸ್ಥೆಯೇ ಆಮೂಲಾಗ್ರವಾಗಿ ಬದಲಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲೆ-ಕಾಲೇಜುಗಳನ್ನು ಆಧುನೀಕರಣಗೊಳಿಸಲು ಖಾಸಗಿಯರ ನೆರವು ಬೇಕು ಎಂದು ಮನವಿ ಮಾಡಿದರು.

ಈಗಾಗಲೇ ರಾಜ್ಯ ಸರ್ಕಾರ ಹೆಲ್ಪ್ ಎಜುಕೇಟ್ ಉಪಕ್ರಮವನ್ನು ಶುರು ಮಾಡಿದ್ದು, ಇದರ ಅಡಿಯಲ್ಲಿ ಖಾಸಗಿ ವಲಯದ ಅನೇಕರು ನೆರವಿಗೆ ಮುಂದೆ ಬಂದಿದ್ದಾರೆ. ಗುಣಮಟ್ಟದ ಶಿಕ್ಷಣ ಕೊಡುವ ಸರ್ಕಾರದ ಉದ್ದೇಶಕ್ಕೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದ್ದಾರೆ. ಈ ಉಪಕ್ರಮದಡಿ ಕಾಗ್ನಿಜೆಂಟ್ ಸಂಸ್ಥೆ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಉಪಯೋಗಕ್ಕಾಗಿ 12,000 ಡೀಬಾಂಡೆಡ್ ಕಂಪ್ಯೂಟರ್‌ಗಳನ್ನು ನೀಡಿದ್ದು, ಅವುಗಳಲ್ಲಿ 40 ಕಂಪ್ಯೂಟರ್‌ಗಳನ್ನು ಈ ಕಾಲೇಜಿಗೆ ಒದಗಿಸಿ ಕಂಪ್ಯೂಟರ್ ಪ್ರಯೋಗಾಲಯವನ್ನೂ ರೂಪಿಸಲಾಗಿದೆ.

ಈಗ ಈ ಪ್ರಯೋಗಾಲಯವನ್ನೂ ಲೋಕಾರ್ಪಣೆ ಮಾಡಲಾಗಿದೆ ಎಂದು ಹೇಳಿದರು.

ಶಾಸಕಿ ಅನಿತಾ ಕುಮಾರಸ್ವಾಮಿ, ಶಾಸಕ ಎ.ಮಂಜುನಾಥ್, ಎಂಎಲ್‌ಸಿಗಳಾದ ಅ. ದೇವೇಗೌಡ, ಸಿ.ಎಂ. ಲಿಂಗಪ್ಪ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್, ಸಿಇಒ ಇಕ್ರಂ ಮುಂತಾದವರು ಇದ್ದರು.

ಶಾಲೆ ವಿಶೇಷ : ಸುಮಾರು 4.28 ಕೋಟಿ ರೂ. ವೆಚ್ಚದಲ್ಲಿ 22 ಕೊಠಡಿಗಳನ್ನು ನಿರ್ಮಾಣ ಮಾಡಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಇಡೀ ಕನ್ನಡ ಮಾದರಿ ಪ್ರಾಥಮಿಕ ಶಾಲೆಗೆ ಜಾಗತಿಕ ಗುಣಮಟ್ಟದ ಸ್ಪರ್ಶ ನೀಡಿದೆ. ಖಾಸಗಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ಯಾವ ಶಾಲೆಗೂ ಕಡಿಮೆ ಇಲ್ಲದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಿದೆ. ಸುಸಜ್ಜಿತ ಲ್ಯಾಬ್, ಅಡುಗೆ ಮನೆ, ಹೈಟೆಕ್ ಗ್ರಂಥಾಲಯ, ಅಂಗನವಾಡಿ ಮಕ್ಕಳಿಗೂ ಒಂದು ಕೊಠಡಿ, ಸ್ಮಾರ್ಟ್ ಕ್ಲಾಸ್ ರೂಮ್ ವ್ಯವಸ್ಥೆ ಮಾಡಲಾಗಿದ್ದು, ಇಡೀ ಜಿಲ್ಲೆಯಲ್ಲಿ ಅತ್ಯುತ್ತಮ ಸೌಲಭ್ಯಗಳುಳ್ಳ ಸರ್ಕಾರಿ ಶಾಲೆ ಇದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net