

ಮುಂಬೈ: ಮಹಾರಾಷ್ಟ್ರದಲ್ಲಿ(Maharashtra) ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬಗ್ಗೆ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಸಸ್ಪೆನ್ಸ್ಗೆ ಬುಧವಾರ(ಡಿಸೆಂಬರ್ 4) ತೆರೆ ಬಿದ್ದಿದೆ. ದೇವೇಂದ್ರ ಫಡ್ನವೀಸ್ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇದಾದ ನಂತರ ಅವರೇ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಎಂಬ ಚಿತ್ರಣ ಸ್ಪಷ್ಟವಾಯಿತು.
ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಯ ರೇಸ್‌ನಿಂದ ಕಳೆದ ವಾರ ತಮ್ಮ ಹೆಸರನ್ನು ಹಿಂಪಡೆದಿದ್ದ ಏಕನಾಥ್ ಶಿಂಧೆ ಇದೀಗ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ. ನಾಳೆ ಮುಂಬೈನಲ್ಲಿ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಶಿವಸೇನಾ ಮೂಲಗಳು ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.
ಗುರುವಾರ ಸಂಜೆ 5:30ಕ್ಕೆ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಏಕನಾಥ್ ಶಿಂಧೆ ಕೂಡ ಉಪಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಗುರುವಾರ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಫಡ್ನವೀಸ್ ಏಕನಾಥ್ ಶಿಂಧೆ ಅವರನ್ನು ಸರ್ಕಾರಕ್ಕೆ ಸೇರುವಂತೆ ಮನವಿ ಮಾಡಿದ್ದರು.
ರಾಜ್ಯಪಾಲರನ್ನು ಭೇಟಿಯಾದ ನಂತರ ನೀವು ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಕೂಡ ನಾಳೆ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುತ್ತೀರಾ ಎಂದು ಕೇಳಿದಾಗ ಸಂಜೆಯವರೆಗೂ ಕಾಯುವಂತೆ ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ ಹೇಳಿದ್ದರು. ಈ ಬಗ್ಗೆ ಅಜಿತ್ ಪವಾರ್ ನಾನು ಪ್ರಮಾಣ ವಚನ ಸ್ವೀಕರಿಸುತ್ತೇನೆ ಕಾಯುವುದಿಲ್ಲ ಎಂದು ತಿಳಿಸಿದ್ದರು. ಆದರೆ, ಪವಾರ್‌ಗೆ ಉತ್ತರಿಸಿದ ಶಿಂಧೆ “ದಾದಾ (ಅಜಿತ್ ಪವಾರ್) ಬೆಳಗ್ಗೆ ಮತ್ತು ಸಂಜೆ ಎರಡೂ ಸಮಯಗಳಲ್ಲಿ ಪ್ರಮಾಣವಚನ ಸ್ವೀಕರಿಸಿದ ಅನುಭವವನ್ನು ಹೊಂದಿದ್ದಾರೆ ಎಂದು ಟೀಕಿಸಿದರು.
ಫಡ್ನವೀಸ್ ಅವರು ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರೊಂದಿಗೆ ಬುಧವಾರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಮಹಾ ಸಮ್ಮಿಶ್ರ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ರಾಜ್ಯ ಬಿಜೆಪಿಯ ಕೇಂದ್ರ ವೀಕ್ಷಕರು, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.
ನಾವು ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಬೆಂಬಲ ಪತ್ರ ಸಲ್ಲಿಸಿದ್ದೇವೆ. ನಮ್ಮ ಮೈತ್ರಿಕೂಟದ ಪಾಲುದಾರರಾದ ಶಿವಸೇನೆ ಮತ್ತು ಎನ್‌ಸಿಪಿ ನನ್ನನ್ನು ಮಹಾಯುತಿಯ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿವೆ. ರಾಜ್ಯಪಾಲರು ಎಲ್ಲ ಮನವಿಗಳನ್ನು ಸ್ವೀಕರಿಸಿ ನಾಳೆ ಸಂಜೆ 5.30ಕ್ಕೆ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದರು ಎಂದು ಫಡ್ನವೀಸ್ ತಿಳಿಸಿದರು.(ಏಜೆನ್ಸೀಸ್)