ದೇವೇಗೌಡರ ದೂರಿನ ಮೇಲೆ ಸಂಸದ ಡಿ.ಕೆ.ಸುರೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಸೂಚನೆ

dk suresh
Published on

ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್​​ ಅವರು ಕ್ಷೇತ್ರದಲ್ಲಿ ಉಚಿತ ಕುಕ್ಕರ್​ಗಳನ್ನು ಹಂಚಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಆರೋಪ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಮುಖ್ಯ ಚುನಾವಣಾಕಾರಿಗೆ ಸೂಚನೆ ನೀಡಿದೆ.

ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಈ ಬಗ್ಗೆ ರಾಜ್ಯ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಯೋಗಕ್ಕೆ ಪತ್ರ ಬರೆದಿದ್ದರು.

ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಡಿ.ಕೆ.ಸುರೇಶ್ ಉಲ್ಲಂಘಿಸಿದ್ದರೆ ತತಕ್ಷಣವೇ ಅವರ ಮೇಲೆ ಸೂಕ್ತವಾದ ಕಾನೂನು ಕ್ರಮವನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಮುಖ್ಯ ಚುನಾವಣಾ ಆಯುಕ್ತರು ಸೂಚನೆ ಕೊಟ್ಟಿದ್ದಾರೆ.

ಕಳೆದ 21ರಂದು ಆಯೋಗಕ್ಕೆ ಪತ್ರ ಬರೆದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಭ್ರಷ್ಟಾಚಾರ ಚಟುವಟಿಕೆಗಳು ನಡೆಯುತ್ತಿವೆ. ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಈ ಕುರಿತು ನಾವು ಪತ್ರ ಬರೆದರೂ ಚುನಾವಣಾಧಿಕಾರಿಗಳು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net