ಬೆಂಗಳೂರು:
ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಪ್ರಾರಂಭವಾಗಿದೆ.
ವಾಲ್ಮಿಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿಗಳು ವಹಿಸಲಾಗಿದೆ.
ಮೊನ್ನೆಯಷ್ಟೆ ಬಳ್ಳಾರಿಯ ಜಿಂದಾಲ್‌ನಲ್ಲಿ ಮೊಕ್ಕಾಂ ಹೂಡಿದ್ದ ಸಿಎಂ, ಆ ಜಿಲ್ಲೆಯ ರಾಜಕೀಯ ಆಗು ಹೋಗು ಬಗ್ಗೆ ಚರ್ಚೆ ನಡೆಸಿದ್ದರು. ವಿಜಯನಗರ ಜಿಲ್ಲೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಬಹಳ ಎಚ್ಚರಿಕೆಯಿಂದ ರಾಜಕೀಯ ನಿರ್ಧಾರ ತೆಗೆದುಕೊಂಡಿದ್ದಾರೆ.
ವಿಜಯನಗರ ಜಿಲ್ಲೆಯ ಉಸ್ತುವಾರಿಯಾಗಿದ್ದ ಜಮೀರ್ ಅಹಮದ್ ಅವರಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ವಹಿಸುವ ಮೂಲಕ ಚುನಾವಣೆಗೆ ಸಿದ್ಧತೆ ನಡೆಸಿಕೊಳ್ಳುವಂತೆ ವೇದಿಕೆ ಸಜ್ಜು ಮಾಡಿದ್ದಾರೆ.
ತುಕರಾಂ ರಾಜೀನಾಮೆಯಿಂದ ತೆರವಾದ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಾಗಿದೆ. ಆ ಮುನ್ನೋಟ ಇಟ್ಟುಕೊಂಡೆ ಸಿಎಂ ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮೇಲುಸ್ತುವಾರಿ ನೋಡಿಕೊಳ್ಳಲಿದ್ದಾರೆ. ಈಗಾಗಲೇ ಚನ್ನಪಟ್ಟಣದಲ್ಲಿ ಒಂದು ಸುತ್ತು ಹಾಕಿ ಬಂದಿರುವ ಡಿಕೆಶಿ, ಚುನಾವಣೆ ಸಿದ್ಧತೆಗೆ ಸೂಚನೆ ನೀಡಿದ್ದಾರೆ.
ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ಹಾವೇರಿ ಜಿಲ್ಲೆ ಶಿಗ್ಗಾಂವ ಕ್ಷೇತ್ರಕ್ಕೆ ಚುನಾವಣೆ ಉಸ್ತುವಾರಿಯನ್ನು ಸಚಿವ ಶಿವಾನಂದ ಪಾಟೀಲ ಅವರಿಗೆ ವಹಿಸಲಾಗಿದೆ. ಇವರ ಜೊತೆಗೆ ದಾವಣಗೆರೆ ಜಿಲ್ಲೆ ಉಸ್ತುವಾರಿ ಮಲ್ಲಿಕಾರ್ಜುನ ಅವರಿಗೆ ಹೆಚ್ಚಿನ ಜವಬ್ದಾರಿ ನೀಡುವ ಸಾದ್ಯತೆ ಇದೆ.
ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಕಾಂಗ್ರೆಸ್ ಈಗಿನಿಂದಲೇ ಸಿದ್ಧತೆ ನಡೆಸುತ್ತಿದ್ದು, ಅದಕ್ಕೆ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸವನ್ನು ಮಾಡುತ್ತಿದೆ.