

ಬೆಂಗಳೂರು: ವಿಧಾನ ಪರಿಷತ್ ಸದಸ್ಯರ ಆಯ್ಕೆ ವಿಚಾರದಲ್ಲಿ ಸಿಎಂ,ಡಿಸಿಎಂ ಇಬ್ಬರೇ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತವಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಸಂಬಂಧ ನನ್ನನ್ನೂ ಸೇರಿ ಹಿರಿಯರು ಹಾಗೂ ಅನುಭವಿಗಳ ಜತೆ ಸಮಾಲೋಚನೆ ನಡೆಸುವುದು ಸೂಕ್ತ. ಏಕಾಏಕಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೇ ಕುಳಿತು ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಮ್ಮನ್ನೂ ಸೇರಿದಂತೆ ಪಕ್ಷದ ಹಿರಿಯರ ಜೊತೆ ಚರ್ಚೆ ಮಾಡಬೇಕು. ಪಕ್ಷ ಹಾಗೂ ಸರ್ಕಾರದಲ್ಲಿ ಕೆಲಸ ಮಾಡಿದವರ ಸಂಪರ್ಕದಲ್ಲಿರುವವರ ಬಗ್ಗೆ ಚರ್ಚೆ ಮಾಡಬೇಕು. ಇದರಿಂದ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರಾಗಿದ್ದವರು, ಪಕ್ಷದಲ್ಲಿ ಅನೇಕ ಜವಾಬ್ದಾರಿ ನಿಭಾಯಿಸಿ ಅನುಭವಿಗಳಾಗಿರುವವರ ಸಲಹೆ ಸೂಚನೆಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾವಾರು, ಜಾತಿವಾರು ಹಾಗೂ ಪಕ್ಷ ಸಂಘಟನೆಯಲ್ಲಿ ಸಹಾಯ ಮಾಡಿದವರು ಯಾವ ಜಾತಿ ಕಾಂಗ್ರೆಸ್ ಜತೆ ದೃಢವಾಗಿ ನಿಂತಿದೆ ಎಂಬುದನ್ನು ಚರ್ಚೆ ಮಾಡಬೇಕು ಎಂದರು.
ಸರ್ಕಾರದ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡಬೇಕು. ಜಿಲ್ಲಾ ಪ್ರವಾಸದಲ್ಲೂ ಜಿಲ್ಲಾ ಕಾಂಗ್ರೆಸ್ ಕಚೇರಿಗಳಿಗೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರ ಜತೆ ಚರ್ಚೆ ಮಾಡಬೇಕು ಎಂಬುದು ಹೊಸದಲ್ಲ. ಈ ಹಿಂದೆ ನಾನು ಎಂಟು ವರ್ಷ ಪಕ್ಷದ ಅಧ್ಯಕ್ಷನಾಗಿದ್ದಾಗ ಇದೇ ಕೆಲಸ ಮಾಡಿದ್ದೇನೆ. ಇತ್ತಿಚೆಗೆ ಸಚಿವರು ಪಕ್ಷದ ಕಚೇರಿಯತ್ತ ಬರುತ್ತಿರಲಿಲ್ಲ ಎಂಬುದನ್ನು ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಮನಿಸಿದ್ದಾರೆ. ಹಾಗಾಗಿ ಈ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕೋ ಅಥವಾ ಬೇಡವೋ ಎಂಬುದನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಈ ವಿಚಾರವನ್ನು ಡಿ.ಕೆ.ಶಿವಕುಮಾರ್ ಆಗಲೀ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲೀ ತೀರ್ಮಾನ ಮಾಡುವುದಿಲ್ಲ. ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರಾಗಿ ಎರಡೂ ಹುದ್ದೆಗಳನ್ನು ನಿಭಾಯಿಸಲು ಸಮರ್ಥರಿದ್ದಾರೆ. ಅದು ಹೊರೆಯಾಗಿದ್ದರೆ ಅದನ್ನು ಅವರು ಹೇಳುತ್ತಾರೆ. ಜವಾಬ್ದಾರಿ ಹೆಚ್ಚಾಗಿದೆ ಎಂದು ಹೈಕಮಾಂಡ್‌ಗೆ ಅನಿಸಿದರೆ ಆಗ ಬದಲಾವಣೆ ಮಾಡುತ್ತಾರೆ. ಯಾವುದೇ ನಿರ್ಧಾರವಾಗಲು ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ತಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದರೆ ನಿಭಾಯಿಸಲು ಸಿದ್ಧ. ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧ ಎಂಬ ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, ಪಕ್ಷಕ್ಕಾಗಿ ತ್ಯಾಗ ಮಾಡಲು ಬಹಳಷ್ಟು ಜನ ಇದ್ದಾರೆ. ಈ ಸಂಖ್ಯೆಯೇನು ಕಡಿಮೆಯಿಲ್ಲ. ರಾಜಣ್ಣ ಅವರು ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ಹೇಳಿರುವುದು ಸಂತೋಷದ ವಿಚಾರ ಎಂದು ಹೇಳಿದರು.
ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಪ್ರಕಾರ ಕ್ರಮಗಳು ಚಾಲ್ತಿಯಲ್ಲಿವೆ. ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ರಾಜತಾಂತ್ರಿಕ ಪಾಸ್‌ಪೋರ್ಟ್ ಸೌಲಭ್ಯವಿದೆ. ಈ ನಡುವೆ ಕೇಂದ್ರ ಸರ್ಕಾರ ಕೂಡ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇದನ್ನೆಲ್ಲ ತಿಳಿದುಕೊಂಡು ಪ್ರಜ್ವಲ್ ರೇವಣ್ಣ ಭಾರತಕ್ಕೆ ಮರಳುವುದಾಗಿ ಹೇಳಿರಬಹುದು. ನಾವು ಮೇ 31 ರವರೆಗೂ ಕಾದು ನೋಡುತ್ತೆವೆ. ಒಂದು ವೇಳೆ ಬರದೇ ಇದ್ದರೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಡಾ.ಪರಮೇಶ್ವರ ಹೇಳಿದರು.