ತುರ್ತು ರಕ್ಷಣೆ-ಪರಿಹಾರ ಕಾರ್ಯ: ಸಿಎಂ ಸೂಚನೆ | Flood affected area

SiddaramaiahPCOX_vb_03
Published on

ಬೆಂಗಳೂರು: ಕೃಷ್ಣಾ ಮತ್ತು ಭೀಮಾ ನದಿಗಳ ಪ್ರವಾಹದಿಂದ ತೀರದಲ್ಲಿ ಪ್ರದೇಶದಲ್ಲಿ ಉಂಟಾಗಿರುವ ಪರಿಸ್ಥಿತಿಯ ಗಂಭೀರತೆಗೆ ತಕ್ಷಣ ಸ್ಪಂದಿಸಿ, ತುರ್ತು ರಕ್ಷಣೆ ಹಾಗೂ ಪರಿಹಾರ ಕಾರ್ಯ ಚುರುಕುಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಆಡಳಿತಗಳಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ, ವಸ್ತುಸ್ಥಿತಿ ಮಾಹಿತಿ ಪಡೆದುಕೊಂಡರು.

ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಟ್ಟಿರುವುದರಿಂದ ಭೀಮಾ ಹಾಗೂ ಬೆಣ್ಣೆತೊರಾ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಬೇಕು ಎಂದರು.

ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಿಎಂ ನೀಡಿದ ಸೂಚನೆಗಳು

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು.

ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು.

ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳು ಬೇಕಾದ ಸೌಲಭ್ಯ, ಜಾನವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net