ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ಒತ್ತು

news sp charge
ಚಿಕ್ಕಮಗಳೂರಲ್ಲಿ ನಿರ್ಗಮಿತ ಎಸ್ಪಿ ಉಮಾ ಪ್ರಶಾಂತ್ ಅವರು ನೂತನ ಎಸ್ಪಿ ಡಾ. ವಿಕ್ರಂ ಅಮಟೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
Published on

ಚಿಕ್ಕಮಗಳೂರು: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಂ ಅಮಟೆ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್ಪಿ ಉಮಾ ಪ್ರಶಾಂತ್ ಅವರು ಅಧಿಕಾರ ಹಸ್ತಾಂತರಿಸಿದರು.

ಒಂದು ವರ್ಷಕ್ಕೂ ಅಧಿಕ ಕಾಲ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ ಉಮಾ ಪ್ರಶಾಂತ್ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಐಪಿಎಸ್ ಅಧಿಕಾರಿ ಡಾ. ವಿಕ್ರಂ ಅಮಟೆ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ನಿರ್ಗಮಿತ ಎಸ್ಪಿ ಉಮಾ ಪ್ರಶಾಂತ್ ಮಾತನಾಡಿ, ಒಂದು ವರ್ಷಕ್ಕೂ ಹೆಚ್ಚು ಕಾಲ ಕೆಲಸ ಮಾಡಿದ ತೃಪ್ತಿಯಿದೆ. ಮಲೆನಾಡು ವಿಶೇಷ ಜಿಲ್ಲೆಯಾಗಿತ್ತು. ಇಲ್ಲಿ ವಿಭಿನ್ನ ಅಪರಾಧಗಳು ಸಂಭವಿಸುತ್ತಿದ್ದವು. ಪೊಲೀಸ್, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಹಕಾರದಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗಿದೆ. ಮುಖ್ಯವಾಗಿ ನಾಗರಿಕರು ನಮ್ಮೊಂದಿಗೆ ಕೈಜೋಡಿಸಿದ್ದಾರೆ ಎಂದರು.
ದತ್ತಪೀಠ ಜಯಂತಿ, ಚುನಾವಣೆಯ ವೇಳೆ ಯಾವುದೇ ರೀತಿ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಲಾಗಿತ್ತು. ಇಲ್ಲಿ ಕೆಲಸ ಮಾಡಿದ ತೃಪ್ತಿಯಿದೆ ಎಂದು ಹೇಳಿದರು.
ನೂತನ ಎಸ್ಪಿ ಡಾ. ವಿಕ್ರಂ ಅಮಟೆ ಮಾತನಾಡಿ, ದಕ್ಷಣ ಕನ್ನಡ, ಬೆಳಗಾವಿ, ಶಿವಮೊಗ್ಗದಲ್ಲಿ ಕೆಲಸ ಮಾಡಿದ್ದೇನೆ. ಅಧಿಕಾರಿಗಳ ಸಭೆ ಮಾಡಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ಒತ್ತು ನೀಡಲಾಗುವುದು. ಜಿಲ್ಲೆಯಲ್ಲಿ ಪೊಲೀಸ್ ಚಟುವಟಿಕೆಗಳು ಸಕ್ರಿಯವಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವುದರ ಜತೆಗೆ ಅನೈತಿಕ, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು. ಸಾರ್ವಜನಿಕರ ಸಹಕಾರ ಪಡೆದು ಕಾರ್ಯರೂಪಕ್ಕೆ ತರಲಾಗುವುದು ಎಂದರು.
ಎಎಸ್ಪಿ ಕೃಷ್ಣಮೂರ್ತಿ, ವಿವಿಧ ಠಾಣೆಗಳ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net