ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನೌಕರರ ಪ್ರತಿಭಟನೆ

teachers
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಪ್ರಮುಖರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಚ್.ನಾಗರಾಜಪ್ಪ, ತಿಪ್ಪೇಶ, ಶಿವಕುಮಾರ್, ರಾಜಪ್ಪ, ರಮೇಶ್ ಸೊರಬ ಮುಂತಾದವರಿದ್ದರು.
Published on

ಶಿವಮೊಗ್ಗ:ಅನುದಾನಿತ ಶಾಲಾ, ಕಾಲೇಜುಗಳ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಪ್ರಮುಖರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಖಾಸಗಿ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳ(ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ) ವಿಧೇಯಕ 2014ಕ್ಕೆ ತಿದ್ದುಪಡಿ ತರಬೇಕು. ಇಲ್ಲವೇ ರದ್ದುಪಡಿಸಬೇಕು. 2006ರ ಪೂರ್ವದಲ್ಲಿ ನೇಮಕವಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರನ್ನು ಅನುದಾನಕ್ಕೂ ಪೂರ್ವದ ಸೇವೆಯನ್ನು ಕೇವಲ ಪಿಂಚಣಿ ಸೌಲಭ್ಯಕ್ಕೆ ಮಾತ್ರ ಪರಿಗಣಿಸಿ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.
ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್‌ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೆ ತರುವ ಭರವಸೆ ನೀಡಿತ್ತು ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದರು.
ಒಪಿಎಸ್ ಜಾರಿ ವಿಳಂಬವಾದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವಂತೆ ಎನ್‌ಪಿಎಸ್ ಯೋಜನೆಯನ್ನು ಯಥಾವತ್ತಾಗಿ ಅನುದಾನಿತ ನೌಕರರಿಗೂ ನೀಡಬೇಕು. ನೇಮಕಾತಿ ಪ್ರಾಧಿಕಾರದ ಪಾಲಿನ ವಂತಿಗೆಯನ್ನು ಆಡಳಿತ ಮಂಡಳಿಗಳ ಬದಲಿಗೆ ಸರ್ಕಾರವೇ ಭರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ನೌಕರರಿಗೆ ನೀಡುತ್ತಿರುವಂತೆ ಅನುದಾನಿತ ನೌಕರರಿಗೂ ಆರೋಗ್ಯ ಸಂಜೀವಿನಿ ಮತ್ತಿತರ ವೈದ್ಯಕೀಯ ಸೌಲಭ್ಯಗಳನ್ನು ನೀಡಬೇಕು. 2002 ರಿಂದ 2020ರವರೆಗೆ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಮರಣ, ನಿವೃತ್ತಿ, ರಾಜೀನಾಮೆ ಮತ್ತಿತರ ಕಾರಣಗಳಿಗೆ ಖಾಲಿ ಆಗಿರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ಈ ಬೇಡಿಕೆಗಳ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಸಮಾವೇಶ ಸಹ ನಡೆಸಲಾಗಿದೆ. ಆದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಸೆ.5ರೊಳಗೆ ಬೇಡಿಕೆ ಈಡೇರಿಸದೇ ಇದ್ದಲ್ಲಿ ಶಾಲಾ, ಕಾಲೇಜು ಬಂದ್ ಮಾಡಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಂಘದ ಜಿಲ್ಲಾಧ್ಯಕ್ಷ ಎಚ್.ನಾಗರಾಜಪ್ಪ, ಕಾರ್ಯದರ್ಶಿ ಶಿವಕುಮಾರ್, ಪ್ರಮುಖರಾದ ತಿಪ್ಪೇಶ, ರವಿ ಭದ್ರಾವತಿ, ರಮೇಶ್ ಸೊರಬ, ರಾಜಪ್ಪ ಮುಂತಾದವರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net