

ಮದ್ದೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವವೇ ಮೆಚ್ಚುವಂತಹ ಶ್ರೇಷ್ಠ ಸಂವಿಧಾನ ನೀಡಿದ ಮಹಾನ್ ವ್ಯಕ್ತಿ ಎಂದು ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್ ಪ್ರಶಂಸೆ ವ್ಯಕ್ತಪಡಿಸಿದರು.
ಪಟ್ಟಣದ ಪುರಸಭಾ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಬೇಡ್ಕರ್ ಅವರು ಉತ್ತಮ ಸಂವಿಧಾನ ನೀಡಿದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸಮಾನತೆಯಿಂದ ಹಾಗೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಅಂಬೇಡ್ಕರ್ ವಿಶ್ವಕಂಡ ಮಹಾನ್ ಜ್ಞಾನಿಯಾಗಿದ್ದರು ಎಂದು ಬಣ್ಣಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದ ಆವರಣದಿಂದ ವಿವಿಧ ಜಾನಪದ ಕಲಾಪ್ರಕಾರಗಳೊಂದಿಗೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಇರಿಸಿ ಬೃಹತ್ ಮೆರವಣಿಗೆಯೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುರಸಭಾ ಆವರಣಣಕ್ಕೆ ತರಲಾಯಿತು. ಪುರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ತಹಸೀಲ್ದಾರ್ ಡಾ.ಸ್ಮಿತಾರಾಮು, ತಾಪಂ ಇಒ ಡಾ.ಸ್ಮಿತಾರಾಮು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾಗರಾಜು, ಬಿಇಒ ಧನಂಜಯ ಸೇರಿದಂತೆ ಇತರರು ಹಾಜರಿದ್ದರು.