ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯಲಿ

14tnp02m
Published on

ತಿ.ನರಸೀಪುರ: ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಬೇಕಾದರೆ ಎಲ್ಲ ಮಕ್ಕಳಿಗೂ ಶಿಕ್ಷಣ ದೊರಕಬೇಕು ಎಂದು ತಹಸೀಲ್ದಾರ್ ಡಿ.ನಾಗೇಶ್ ಅಭಿಪ್ರಾಯಪಟ್ಟರು.

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜಾಗೃತಿ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಶಿಕ್ಷಣ ಎಲ್ಲರಿಗೂ ತಲುಪುವ ನಿಟ್ಟಿನಲ್ಲಿ ಸರ್ಕಾರ ಯೋಜನೆ ರೂಪಿಸಿದ್ದು, ಪ್ರತಿಯೊಬ್ಬರೂ ಅದರ ಸದುಪಯೋಗ ಪಡೆಯಬೇಕು ಎಂದರು.

ಮಕ್ಕಳ ಗಣತಿ ಸಂದರ್ಭ ಬಾಲ ಕಾರ್ಮಿಕರನ್ನು ಗುರುತಿಸಿ, ಅವರಿಗೆ ಅರಿವು ಮೂಡಿಸಬೇಕು. ಎಲ್ಲ ಇಲಾಖೆಗಳು, ಸಾರ್ವಜನಿಕರು ಮತ್ತು ಪ್ರಜ್ಞಾವಂತ ನಾಗರಿಕರು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಮುಂದಾಗುವಂತೆ ಮನವಿ ಮಾಡಿದರು.

ಕಾರ್ಮಿಕ ನಿರೀಕ್ಷಕ ಗಂಗಾಧರ್ ಮಾತನಾಡಿ, ಶಿಕ್ಷಣ ಇದ್ದಲ್ಲಿ ಶಿಸ್ತು ಇರುತ್ತದೆ. ಸಾಮಾಜಿಕ ನ್ಯಾಯ ಮತ್ತು ಭದ್ರತೆ ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಅಪಾಯಕಾರಿ ಉದ್ಯಮಗಳಲ್ಲಿ ತೊಡಗಿರುವ ಮಕ್ಕಳನ್ನು ರಕ್ಷಿಸುವುದು ಎಲ್ಲರ ಹೊಣೆ ಎಂದರು.

ಬಾಲ ಕಾರ್ಮಿಕರು ತಂದೆ-ತಾಯಿ ಪ್ರೀತಿಯಿಂದ ವಂಚಿತರಾಗಿರುತ್ತಾರೆ. ಅಲ್ಲದೆ, ಅನೇಕ ಮಕ್ಕಳು ದೌರ್ಜನ್ಯಕ್ಕೆ ಒಳಗಾಗಿದ್ದು, ಇಂತಹ ಪ್ರಕರಣಗಳನ್ನು ತಡೆಯಬೇಕು. ಬಾಲ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡ ಮಾಲೀಕರು ಮಾತ್ರವಲ್ಲದೆ, ಅದಕ್ಕೆ ಕಾರಣರಾದ ಪಾಲಕರನ್ನೂ ಶಿಕ್ಷೆಗೆ ಗುರಿಪಡಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಎಚ್ಚರಿಸಿದರು.

ಶಿರಸ್ತೇದಾರ್ ಪ್ರಭುರಾಜ್, ತಾಲೂಕು ಭಾರತ ಮಾತಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಹೆಳವರಹುಂಡಿ ರಾಜೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net