

ಬೆಂಗಳೂರು: ಕರೊನಾ ವಿರುದ್ಧದ ಲಸಿಕೆ ಅಭಿಯಾನಕ್ಕೆ ಇನ್ನಷ್ಟು ವೇಗ ಸಿಗುವ ಶುಭ ಸುದ್ದಿಯನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೀಡಿದ್ದಾರೆ. ಲಸಿಕೆ ಕುರಿತಂತೆ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಇನ್ನುಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲಾಗುವುದು ಎಂದರು.
ಆಗಸ್ಟ್ನಲ್ಲೇ 1.10 ಕೋಟಿ ಲಸಿಕೆಯನ್ನು ಕೇಂದ್ರ ಸರ್ಕಾರ ಕಳಿಸಿಕೊಟ್ಟಿದೆ. ನಾನು ಮತ್ತು ಸಿಎಂ ಕೇಂದ್ರದ ಮಟ್ಟದಲ್ಲಿ ರ್ಚಚಿಸಿದ ಬಳಿಕ ಪೂರೈಕೆ ಹೆಚ್ಚಾಗಿದೆ. ಇನ್ನುಮುಂದೆ ಪ್ರತಿದಿನ 5 ಲಕ್ಷ ಲಸಿಕೆ ನೀಡಲಾಗುವುದು. ವಾರದಲ್ಲಿ ಒಂದು ದಿನ (ಬುಧವಾರ) ಲಸಿಕಾ ಉತ್ಸವ ನಡೆಸಿ, ಈ ಪ್ರಮಾಣವನ್ನು 5ದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗುವುದು. ಈಗ ಬರುತ್ತಿರುವ ಲಸಿಕೆ ಪ್ರಮಾಣವೇ ಮುಂದವರಿದಲ್ಲಿ ಒಂದೂವರೆಯಿಂದ ಎರಡು ಕೋಟಿ ಲಸಿಕೆಯನ್ನು ಒಂದು ತಿಂಗಳಲ್ಲಿ ನೀಡಬಹುದು. ಇಡೀ ದೇಶದಲ್ಲಿ ಲಸಿಕೆ ಕಾರ್ಯ ಪೂರ್ಣಗೊಂಡ ನಗರ ಬೆಂಗಳೂರು ಆಗಬೇಕು ಎಂಬ ಗುರಿ ಇದೆ ಎಂದು ಹೇಳಿದರು.
ಇಡೀ ರಾಜ್ಯದಲ್ಲಿ ಈವರೆಗೆ 4 ಕೋಟಿ ಲಸಿಕೆ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ. ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚು ಮಾಡಲು ಕ್ರಮ ಕೈಗೊಳ್ಳಲಾಗುವುದು. ಕೊಳಗೇರಿ ನಿವಾಸಿಗಳಿಗೆ ಪ್ರತಿದಿನ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅವರು ವಾಸ ಮಾಡುವ ಸ್ಥಳದಲ್ಲೇ ಸಿಬ್ಬಂದಿ ನಿಯೋಜಿಸಿ ಅಲ್ಲೇ ಲಸಿಕೆ ನೀಡಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೊದಲಾದ ಗಡಿಭಾಗದ ಜಿಲ್ಲೆಗಳಲ್ಲಿ ಆದ್ಯತೆ ನೀಡಲಾಗಿದೆ. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಾಶಸ್ತ್ಯ ಮೇಲೆ ಎಲ್ಲರಿಗೂ ಲಸಿಕೆ ನೀಡಲಾಗುವುದು. ಒಟ್ಟಾರೆ ಇಡೀ ರಾಜ್ಯದಲ್ಲಿ ಡಿಸೆಂಬರ್ ಅಂತ್ಯಕ್ಕೆ ಎರಡೂ ಡೋಸ್ ಲಸಿಕೆ ನೀಡುವ ಗುರಿ ಇದೆ ಎಂದು ಸುಧಾಕರ್ ವಿವರಿಸಿದರು.