ಆರೋಗ್ಯ ಶಿಬಿರ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ

ನಾಗಮಂಗಲ ಪಟ್ಟಣದ ಶಿಕ್ಷಕರ ಭವನದಲ್ಲಿ ಆರೋಗ್ಯ ಮೇಳ ಸಂಬಂಧಿಸಿದಂತೆ ಶನಿವಾರ ಆಯೋಜಿಸಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿದರು. ಆದರ್ಶ್, ಸತೀಶ್, ಶಿವಕುಮಾರ್ ಇದ್ದರು
ನಾಗಮಂಗಲ ಪಟ್ಟಣದ ಶಿಕ್ಷಕರ ಭವನದಲ್ಲಿ ಆರೋಗ್ಯ ಮೇಳ ಸಂಬಂಧಿಸಿದಂತೆ ಶನಿವಾರ ಆಯೋಜಿಸಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿದರು. ಆದರ್ಶ್, ಸತೀಶ್, ಶಿವಕುಮಾರ್ ಇದ್ದರು
Published on

ಪ್ರಮುಖ ಮುಖ್ಯಾಂಶಗಳು

  • ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಅಬಿಮತ
  • ಪೂರ್ವಭಾವಿ ಸಭೆ
ನಾಗಮಂಗಲ: ಸಾರ್ವಜನಿಕರ ಆರೋಗ್ಯ ಕಾಪಾಡುವ ಮುಖ್ಯ ಗುರಿಯೊಂದಿಗೆ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೃಹತ್ ಆರೋಗ್ಯ ಉಚಿತ ಶಿಬಿರವನ್ನು ಪರಿಣಾಮಕಾರಿಯಾಗಿ ಯಶಸ್ವಿಯಾಗಿಸಲು ಪ್ರಮುಖ ಪಾತ್ರ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ತಿಳಿಸಿದರು.
ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕಿನ ಎಲ್ಲ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಗ್ರಾಪಂ ಪಿಡಿಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಡಳಿತದಿಂದ ಜೂ.9ರಂದು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬೃಹತ್ ಉಚಿತ ಆರೋಗ್ಯ ಶಿಬಿರವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಬೇಕು. ಇದಕ್ಕೆ ಪೂರಕವಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪೂರ್ಣಪ್ರಮಾಣದ ಸಹಕಾರದೊಂದಿಗೆ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶದ ಜನರು ಏನೆಲ್ಲಾ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆಂಬುದು ಆಶಾ ಕಾರ್ಯಕರ್ತರಿಗೆ ಮಾತ್ರ ಗೊತ್ತಿರುತ್ತದೆ. ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಪ್ರತಿಯೊಬ್ಬರನ್ನೂ ಸಹ ಆರೋಗ್ಯವಂತರನ್ನಾಗಿಸಲು ಸಹಾಯ ಮಾಡುವ ಕಾರ್ಯಕ್ರಮ ಇದಾಗಿರುವುದರಿಂದ ಯಾವೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷ್ಯ ವಹಿಸದೆ ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.
ಕೊಪ್ಪ ಹೋಬಳಿ ಸೇರಿದಂತೆ ತಾಲೂಕಿನಲ್ಲಿ 180ಕ್ಕೂ ಹೆಚ್ಚು ಆಶಾ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದು, ಒಬ್ಬ ಆಶಾ ಕಾರ್ಯಕರ್ತೆ ಕನಿಷ್ಠ 125 ಮಂದಿಯನ್ನು ಶಿಬಿರಕ್ಕೆ ಕರೆತರಬೇಕು. ಇದಕ್ಕೆ ಆಯಾ ಗ್ರಾಪಂ ಪಿಡಿಒಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಬೇಕು ಎಂದು ಸೂಚಿಸಿದರು.
ಬೃಹತ್ ಆರೋಗ್ಯ ಶಿಬಿರಕ್ಕೆ ಸಂಬಂಧಿಸಿದಂತೆ ಪಿಡಿಒಗಳು ಗ್ರಾ.ಪಂ.ನಲ್ಲಿ ಸಭೆ ನಡೆಸಿ ತಮ್ಮ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಕಸವಿಲೇವಾರಿ ವಾಹನಗಳ ಮೂಲಕ ಹೆಚ್ಚು ಪ್ರಚಾರ ನಡೆಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಜನರಲ್ಲಿ ಅರಿವು ಮೂಡಿಸಬೇಕು. ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಪಂ ಪಿಡಿಒಗಳೊಂದಿಗೆ ಸಂಪರ್ಕದಲ್ಲಿದ್ದು ಟೀಂ ವರ್ಕ್ ಮಾಡಿ ಸೋಮವಾರದೊಳಗೆ 20ಸಾವಿರಕ್ಕೂ ಹೆಚ್ಚು ಶಿಬಿರಾರ್ಥಿಗಳ ಪಟ್ಟಿ ಸಿದ್ಧಪಡಿಸಬೇಕು ಎಂದು ತಿಳಿಸಿದರು.
ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಬಿ.ಎಸ್.ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಸಿಡಿಪಿಒ ಕೃಷ್ಣಮೂರ್ತಿ, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಮಹೇಶ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಾಘವೇಂದ್ರ, ಪಟ್ಟಣ ಪೊಲೀಸ್ ಠಾಣೆಯ ಇನ್ ಸ್ಪೆೆಕ್ಟರ್ ಶಿವಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ತಾಲೂಕಿನ ಮತ್ತು ಕೊಪ್ಪ ಹೋಬಳಿಯ ಗ್ರಾಪಂ ಪಿಡಿಒಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net