ಕಾನೂನು ನಡುವೆಯೂ ಅನಿಷ್ಟ ಪದ್ಧತಿ ಜೀವಂತ

Child labor
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಅರಿವು ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ಚಾಲನೆ ನೀಡಿದರು. ಜಿ.ಆರ್.ರಾಘವೇಂದ್ರಸ್ವಾಮಿ, ಕೆ.ಸಿ.ಸುಖಿತಾ, ಎ.ಎಸ್.ರಘುನಾಥ್, ಕೃಷ್ಣಪ್ಪ, ದಾದಾಪಿರ್, ಎಂ.ಪಿ.ವೇಣುಗೋಪಾಲ್, ತಾಜುದ್ದೀನ್ ಖಾನ್ ಇದ್ದರು.
Published on

ಶಿವಮೊಗ್ಗ: ಮಕ್ಕಳು ಕಾರ್ಮಿಕರಾಗಿ ಅಮೂಲ್ಯ ಬಾಲ್ಯವನ್ನು ಕಳೆದುಕೊಳ್ಳುತ್ತಿರುವುದು ಅತ್ಯಂತ ನೋವಿನ ಸಂಗತಿ. ಸರ್ಕಾರಗಳು ಅನೇಕ ಕಾಯ್ದೆ, ಕಾನೂನು ಜಾರಿಗೊಳಿಸಿದ್ದರೂ ಈ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಕಳವಳ ವ್ಯಕ್ತಪಡಿಸಿದರು.

ನಗರದ ಬಿ.ಎಚ್.ರಸ್ತೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಜಿಲ್ಲಾ ಕಾರ್ಮಿಕ ಇಲಾಖೆಯಿಂದ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಿಕ್ಷಣ ಇಲಾಖೆ, ಜಿಲ್ಲಾ ವಕೀಲರ ಸಂಘ ಮತ್ತು ಶಿವಮೊಗ್ಗ ಹಾಲು ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಅನಿಷ್ಟ. ಅದನ್ನು ಬೇರುಸಹಿತ ಕಿತ್ತುಹಾಕುವಲ್ಲಿ ಸಮಾಜದ ಎಲ್ಲ ನಾಗರಿಕರು ಸಹಕರಿಸಬೇಕಿದೆ. ಮೇಲು, ಕೀಳು, ಜಾತಿ, ಮತ, ಪಂಥಗಳೆಲ್ಲವನ್ನೂ ಮೀರಿ ಈ ಸಮಾಜದ ಪ್ರತಿ ವ್ಯಕ್ತಿಯೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು. ಶಿಕ್ಷಣ ಪಡೆದ ಎಲ್ಲರೂ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಅವರು ಭವಿಷ್ಯದಲ್ಲಿ ನೆಮ್ಮದಿಯ ಜೀವನ ನಿರ್ವಹಣೆಗೆ ಸೂಕ್ತ ವಾತಾವರಣ ಕಲ್ಪಿಸುವಲ್ಲಿ ಮಾರ್ಗದರ್ಶಿಗಳಾಗಬೇಕು ಎಂದು ಹೇಳಿದರು.

ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು, ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪಾಲಕರಿಗೂ ಕಾನೂನಿನಲ್ಲಿ ಶಿಕ್ಷೆಗೆ ಅವಕಾಶವಿದೆ ಎಂಬುದನ್ನು ಮರೆಯಬಾರದು. ಸಾರ್ವಜನಿಕರು ಅಂತಹ ಮಕ್ಕಳ ಶಿಕ್ಷಣ ಮತ್ತು ಪುನರ್ವಸತಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.

ಗಮನ ಸೆಳೆದ ಸ್ಥಬ್ಧಚಿತ್ರ ವಾಹನದ ಮೆರವಣಿಗೆ

ನಗರದ ಶಿವಪ್ಪನಾಯಕ ವೃತ್ತದಿಂದ ಬಿ.ಎಚ್.ರಸ್ತೆಯ ಸರ್ಕಾರಿ ಪ್ರೌಢಶಾಲೆಯವರೆಗೆ ಸ್ತಬ್ಧಚಿತ್ರ ವಾಹನದ ಮೆರವಣಿ ಹಾಗೂ ಕರಪತ್ರಗಳ ಮೂಲಕ ಕಾನೂನು ಅರಿವು ಜಾಥಾ ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಾಥಾ ಶಿವಪ್ಪ ನಾಯಕ ವೃತ್ತದಿಂದ ಬಿ.ಎಚ್.ರಸ್ತೆಯ ಸರ್ಕಾರಿ ಪ್ರೌಢಶಾಲೆವರೆಗೆ ನಡೆಯಿತು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರಸ್ವಾಮಿ, ಕಾರ್ಮಿಕ ನಿರೀಕ್ಷಕಿ ಕೆ.ಸಿ.ಸುಖಿತಾ, ಶಿವಮೊಗ್ಗ ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ.ವೇಣುಗೋಪಾಲ್, ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎ.ಎಸ್.ರಘುನಾಥ್, ಕಾರ್ಮಿಕ ಅಧಿಕಾರಿ ಕೃಷ್ಣಪ್ಪ, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ದಾದಾಪಿರ್ ಮತ್ತಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net