ರಾಜ್ಯ ಸರ್ಕಾರದಿಂದ ರೈತರ ಶೋಷಣೆ

protest
ಚಿಕ್ಕಮಗಳೂರಿನಲ್ಲಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಪುಷ್ಪರಾಜ್, ಮಹೇಶ್ ಈಶ್ವರಹಳ್ಳಿ, ರಾಜೇಶ್ ಇತರರಿದ್ದರು.
Published on

ಚಿಕ್ಕಮಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 100 ದಿನಗಳು ಕಳೆದಿದೆ. ಅಂದಿನಿಂದ ಸರ್ಕಾರ ರೈತರನ್ನು ಶೋಷಣೆ ಮಾಡುತ್ತಿದೆ. ಪರರ ಮೇಲೆ ಗೂಬೆ ಕೂರಿಸುವ ಮನಸ್ಥಿತಿಯಿರುವ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ ಆರೋಪಿಸಿದರು.
ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ 170 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯಕ್ಕೂ ಅವರ ಸಮಸ್ಯೆ ಆಲಿಸುವ ಪ್ರಯತ್ನ ಮಾಡಿಲ್ಲ ಎಂದು ದೂರಿದರು.
ರೈತರು ದುಡ್ಡಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ್ ಉಡಾಫೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಷ್ಠಾನಗೊಳಿಸಿದ್ದ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ.86 ಮಳೆ ಕೊರತೆಯಾಗಿದೆ. ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಲು ಸರ್ಕಾರಕ್ಕೆ ಮನವಿ ಮಾಡಿದರೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಮುಖಂಡರಾದ ಪುಷ್ಪರಾಜ್, ಮಹೇಶ್ ಈಶ್ವರಹಳ್ಳಿ, ಮಂಜುನಾಥ್, ರಾಜೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net