

ಸಾಗರ: ಆಧುನಿಕ ಜಗತ್ತಿನಲ್ಲಿ ಸಾಕಷ್ಟು ಸವಾಲುಗಳು ಎದುರಾಗುತ್ತವೆ. ವಿದ್ಯಾರ್ಥಿಗಳು ಎಲ್ಲವನ್ನೂ ದಿಟ್ಟತನದಿಂದ ಎದುರಿಸಿ, ಸಿಕ್ಕ ಅವಕಾಶವನ್ನು ಬಳಸಿಕೊಂಡು ಉನ್ನತ ಸ್ಥಾನಕ್ಕೆ ಹೋಗಲು ಪ್ರಯತ್ನಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸಾಗರದ ಇಂದಿರಾ ಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಚಟುವಟಿಕೆಗಳ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿರಾ ಗಾಂಧಿ ಮಹಿಳಾ ಕಾಲೇಜು ಲಿತಾಂಶದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಇನ್ನಿತರೆ ಚಟುವಟಿಕೆಯಲ್ಲೂ ಗಮನಾರ್ಹ ಸಾಧನೆ ಮಾಡುತ್ತಿದೆ. ಉತ್ತಮ ಪ್ರಾಧ್ಯಾಪಕರು, ಮೂಲ ಸೌಲಭ್ಯ, ಮಕ್ಕಳ ಪ್ರತಿಭೆ ಪೂರಕವಾದ ವಾತಾವರಣವಿದೆ. ವಿದ್ಯಾರ್ಥಿಗಳು ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು ಎಂದರು.
ಕಾಲೇಜಿನ ಎದುರು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುತ್ಥಳಿ ನಿರ್ಮಿಸುವ ಉದ್ದೇಶವಿದೆ. ಶೀಘ್ರವೇ ಇದಕ್ಕೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ನಗರಸಭೆ ಸದಸ್ಯರಾದ ಮಧುಮಾಲತಿ, ಗಣಪತಿ ಮಂಡಗಳಲೆ, ಪ್ರಾಚಾರ್ಯೆ ಡಾ. ರಾಜೇಶ್ವರಿ, ಪ್ರಮುಖರಾದ ವೈ.ವಿ.ಗೋಪಾಲಕೃಷ್ಣ, ಉಷಾ, ನಾರಾಯಣಪ್ಪ ಇತರರಿದ್ದರು.