ಕೇಂದ್ರ ಸರ್ಕಾರದ ಧೋರಣೆಗೆ ರೈತರ ಖಂಡನೆ: ಪ್ರತಿಭಟನೆ

raita protest
ಜಗಜಿತ್ ಸಿಂಗ್ ಧಲೇವಾಲಾ ಜತೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿ ರೈತ ಹೋರಾಟಗಾರರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರಿಬಸಪ್ಪ ಗೌಡ, ಎನ್.ಕೆ.ಮಂಜುನಾಥ ಗೌಡ, ಸತೀಶ್, ಮಂಜುನಾಥ್ ಅರೇಕೊಪ್ಪ, ಈಶ್ವರಪ್ಪ ಕೊಡಕಣಿ, ದಾನೇಶ್ ಮುಂತಾದವರು ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
Published on

ಶಿವಮೊಗ್ಗ: ರಾಷ್ಟ್ರೀಯ ರೈತ ಹೋರಾಟದ ಸಂಚಾಲಕ ಜಗಜೀತ್ ಸಿಂಗ್ ಧಲೇವಾಲಾ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಸೋಮವಾರ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗೋಪಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಕ್ತಾಯವಾಯಿತು. ಪ್ರತಿಭಟನಾಕಾರರು ಮಹಾವೀರ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯ ಗಡಿ ಪ್ರದೇಶವ ಕನೂರಿಯಲ್ಲಿ ಪಂಜಾಬ್‌ನ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಷ್ಟ್ರೀಯ ಸಂಚಾಲಕ ಜಗಜಿತ್ ಸಿಂಗ್ ಧಲೇವಾಲಾ ಉಪವಾಸ ನಡೆಸುತ್ತಿದ್ದಾರೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷೃ ವಹಿಸಿದೆ. ಕೂಡಲೇ ಕೇಂದ್ರ ಸರ್ಕಾರ ಮಾತುಕತೆ ನಡೆಸಿ ಧಲೇವಾಲಾ ಪ್ರಾಣ ಉಳಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬೆಲ ಬೆಲೆ ಜಾರಿಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸ್ವಾಮಿನಾಥನ್ ವರದಿ ಜಾರಿಯಾಗಬೇಕು. ರೈತರಿಗೆ ಮಾರಕವಾದ ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ತಕ್ಷಣವೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಗೌರವಾಧ್ಯಕ್ಷ ಎನ್.ಕೆ.ಮಂಜುನಾಥಗೌಡ, ರಾಜ್ಯಾಧ್ಯಕ್ಷ ಕರಿಬಸಪ್ಪ ಗೌಡ, ಜಿಲ್ಲಾಧ್ಯಕ್ಷ ಮಂಜುನಾಥ್ ಅರೇಕೊಪ್ಪ, ಪ್ರಮುಖರಾದ ಸತೀಶ್, ಅಮೃತ್, ಹನುಮಂತ ನಾಯ್ಕ, ದಾನೇಶ್, ಈಶ್ವರಪ್ಪ ಕೊಡಕಣಿ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net