

ನಂಜನಗೂಡು: ಶಾಂತಿಯುತವಾಗಿ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ಬಂಧಿಸುವ ಮೂಲಕ ಅನ್ನದಾತರ ಹೋರಾಟವನ್ನು ಹತ್ತಿಕ್ಕಲು ಮುಂದಾಗಿದ್ದಾರೆ ಎಂದು ಆರೋಪಿಸಿ ರೈತ ಹಾಗೂ ದಲಿತ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಡಿಢೀರ್ ಪ್ರತಿಭಟನೆ ನಡೆಸಿದರು.
ಖಾಸಗಿ ಬಸ್ ನಿಲ್ದಾಣದ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೆಆರ್‌ಎಸ್ ಸಮೀಪ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ವಿರೋಧಿಸಿ ರೈತ ಸಂಘಟನೆಗಳು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯವನ್ನು ಪ್ರಶ್ನಿಸಿ ಕೆಆರ್‌ಎಸ್‌ಗೆ ಮುತ್ತಿಗೆ ಹಾಕಿದ್ದ ರೈತರನ್ನು ಬಂಧಿಸುವ ಮೂಲಕ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ತಕ್ಷಣ ಬಂಧಿತ ರೈತರನ್ನು ಬಿಡುಗಡೆಗೊಳಿಸಬೇಕು ಹಾಗೂ ಕೆಆರ್‌ಎಸ್ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ, ಉಪ ವಿಭಾಗೀಯ ಸಂಚಾಲಕ ಮಂಜು ಶಂಕರಪುರ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಇಮ್ಮಾವು ರಘು, ತಾಲೂಕು ಅಧ್ಯಕ್ಷ ಸತೀಶ್‌ರಾವ್, ಶಿರಮಳ್ಳಿ ಮಂಜುನಾಥ್, ಕೃಷಿ ಮತ್ತು ಟ್ರಾೃಕ್ಟರ್ ಮಾಲೀಕರ ಸಂಘದ ಕಾರ್ಯಾಧ್ಯಕ್ಷ ಕಣೇನೂರು ಜಗದೀಶ್, ಮುಳ್ಳೂರು ಸ್ವಾಮಿ ಭಾಗವಹಿಸಿದ್ದರು.