

ಬೆಂಗಳೂರು: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ಆದೇಶಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಇತರೆ ಅಭ್ಯರ್ಥಿಗಳು ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
ಅಕ್ರಮ ನಡೆದಿರುವುದರಿಂದ ಇಡೀ ಪರೀಕ್ಷೆ ರದ್ದುಗೊಳಿಸಿ ಶುಕ್ರವಾರ ರಾಜ್ಯ ಸರ್ಕಾರ ಮರುಪರೀಕ್ಷೆಗೆ ಆದೇಶಿಸಿತ್ತು. ಇದು ಇತರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಸಂಕಷ್ಟಕ್ಕೆ ದೂಡುವಂತೆ ಮಾಡಿದ್ದು, ಇದರಿಂದ ನಮಗೆ ಅನ್ಯಾಯ ಮಾಡಿದಂತಾಗಲಿದೆ ಎಂದು ಆಯ್ಕೆಯಾದ ಅಭ್ಯರ್ಥಿಗಳು ಮರುಪರೀಕ್ಷೆ ನಡೆಸದಂತೆ ಒತ್ತಾಯಿಸಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಗೆ ನಗರದ ಫ್ರೀಡಂ ಪಾರ್ಕ್ ಬಳಿ ಉಪವಾಸ ಕೈಗೊಳ್ಳಲಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಇನ್ನು ಮರುಪರೀಕ್ಷೆ ನಡೆಸದೇ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.