

ಬೆಳಗಾವಿ: ಸಿಎಂ ಸಿದ್ದರಾಮಯ್ಯನವರು ರಾಜಕೀಯ ಜೀವನದ ಅಂತಿಮ ಹಂತದಲ್ಲಿದ್ದು, ತಮ್ಮ ಸಹೋದ್ಯೋಗಿ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಮುನ್ನಡೆಸಲು ಮಾರ್ಗ ದರ್ಶನ ನೀಡಬೇಕು ಎಂದು ಇಂದು(ಅ. 22) ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ(Yathinda Siddaramaiah) ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಲಗುಡ್ಡಿ ಗ್ರಾಮದಲ್ಲಿ ಕನಕದಾಸರ ವಿಗ್ರಹ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ನನ್ನ ತಂದೆ (ಸಿದ್ದರಾಮಯ್ಯ) ತಮ್ಮ ರಾಜಕೀಯ ಜೀವನದ ಅಂತಿಮ ಹಂತದಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅನ್ನು ಮುಂದಕ್ಕೆ ಕೊಂಡೊಯ್ಯಬೇಕು ಎಂದು ಹೇಳಿ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದಾರೆ.
ರಾಜ್ಯದ ಹಿತದೃಷ್ಟಿಯಿಂದ ಸಿದ್ದರಾಮಯ್ಯನವರು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತಾರೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅವರಿಗೆ ಶಾಸಕರಿಂದ ಸಂಪೂರ್ಣ ಬೆಂಬಲವಿದೆ. ಯಾವುದೇ ಅಸಮಾಧಾನ ಇದ್ದಿದ್ದರೆ, ಶಾಸಕರು ಹೈಕಮಾಂಡ್ ಅನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದ್ದಾರೆ.
ನವೆಂಬರ್‌ನಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಎರಡೂವರೆ ವರ್ಷಗಳ ಅವಧಿ ಪೂರೈಸುವ ಹಿನ್ನೆಲೆ ನಾಯಕತ್ವ ಬದಲಾವಣೆಗೆ ನವೆಂಬರ್ ಕ್ರಾಂತಿ ನಡೆಯಲಿದೆ ಎಂದು ರಾಜಕೀಯ ಚರ್ಚೆ ನಡೆಯುತ್ತಿದೆ. ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರವನ್ನು ಉಲ್ಲೇಖಿಸಿ ಉಳಿದ ಅವಧಿಗೆ ಅವರಿಗೆ ಅಧಿಕಾರ ಬಿಟ್ಟುಕೊಡುವಂತೆ ಒತ್ತಾಯಿಸುತ್ತಿದ್ದಾರೆ. (ಏಜೆನ್ಸೀಸ್)