

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರದಲ್ಲಿ ಮಾತನಾಡುವಾಗ ದಲಿತ ಸಮುದಾಯದ ಭಾವನೆಗಳಿಗೆ ಘಾಸಿಯುಂಟು ಮಾಡುವ ಪದ ಬಳಕೆ ಮಾಡಿದ ಆರೋಪದಡಿ ಉಪೇಂದ್ರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ’ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಅದನ್ನು ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಮತ್ತೊಂದೆಡೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಉಪೇಂದ್ರ ಅವರ ನಿವಾಸಕ್ಕೆ ತೆರಳಿ ನೋಟಿಸ್ ನೀಡಿದ್ದಾರೆ.
ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ ಎಂಬುವವರು ಉಪೇಂದ್ರ ವಿರುದ್ಧ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಉಪೇಂದ್ರ ವಿರುದ್ಧ ಎಸ್‌ಸಿ-ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಮತ್ತು ದ್ವೇಷ ಭಾಷಣ, ಧರ್ಮ, ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಧಾರ್ಮಿಕ ಭಾವನೆಯನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯದ ಸಂಬಂಧ ಪ್ರಕರಣ ದಾಖಲಾಗಿದೆ.
ಎ್ಐಆರ್‌ನಲ್ಲಿ ಏನಿದೆ?
ನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಜನಗಳು ಎಂಬುದಕ್ಕೆ ಉದಾಹರಣೆಯಾಗಿ ಊರು ಅಂದ್ಮೇಲೆ ಹೊಲಗೇರಿ ಇರುತ್ತದೆ ಎಂದು ಮಾತನಾಡಿದ್ದಾರೆ. ಹೊಲೆಯ ಎಂಬುದು ಪರಿಶಿಷ್ಟ ಜಾತಿಯ ಒಂದು ಜನಾಂಗವಾಗಿದ್ದು, ಹೊಲೆಗೇರಿ ಎಂಬುದು ಹೊಲೆಯರು ವಾಸಮಾಡುವ ಸ್ಥಳ ಅಥವಾ ಜನ್ಮ ಸ್ಥಳವಾಗಿದೆ. ಉಪೇಂದ್ರ ಅವರ ಹೊಲೆಗೇರಿ ಎಂಬ ಮಾತುಗಳಿಂದ ದಲಿತ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದು, ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವ ಮೂಲಕ ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುವ ರೀತಿಯಲ್ಲಿ ಮಾತನಾಡಿರುವ ಉಪೇಂದ್ರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಉಪೇಂದ್ರ ಪೋಸ್ಟ್:
ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ… ನನಗೆ ಕೊಡೆ. ಧನ್ಯವಾದಗಳು ಎಂದು ಉಪೇಂದ್ರ ಅವರು ಹೈಕೋರ್ಟ್ ಮಧ್ಯಂತರ ತಡೆ ಆದೇಶದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಸಚಿವ ಮಹಾದೇವಪ್ಪ ಸರಣಿ ಟ್ವೀಟ್ :
ಉಪೇಂದ್ರ ಅವರು, ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಆದರೆ ಸ್ವಾತಂತ್ರ್ಯ ಬಂದು ೭೫ ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ. ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು ಟೇಕನ್ ಾರ್ ಗ್ರಾನ್‌ಟೆಡ್ ಆಗಿ ಉಲ್ಲೇಖಿಸುವ ಈ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು.
ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ಹಲವೆಡೆ ಪ್ರತಿಭಟನೆ:
ಉಪೇಂದ್ರ ಅವರ ಹೇಳಿಕೆ ಖಂಡಿಸಿ ಸೋಮವಾರ ಬೆಂಗಳೂರು ವಿಶ್ವವಿದ್ಯಾಲಯ, ರಾಮನಗರ, ಮಂಡ್ಯ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯಿತು. ಮತ್ತೊಂದೆಡೆ ಉಪೇಂದ್ರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿರುವ ಅವರ ಹೊಸ ನಿವಾಸಕ್ಕೆ ಕೆಎಸ್‌ಆರ್‌ಪಿ ತುಕಡಿ ಮತ್ತು ಸ್ಥಳೀಯ ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಒದಗಿಸಲಾಗಿದೆ.