ಧರ್ಮಸ್ಥಳ ಸಂಘದಿಂದ ಆರ್ಥಿಕ ಸಬಲೀಕರಣ

ಧರ್ಮಸ್ಥಳ ಸಂಘದಿಂದ ಆರ್ಥಿಕ ಸಬಲೀಕರಣ
Published on

ಹನೂರು: ಮಹಿಳೆಯರು ಸ್ವಾವಲಂಬನೆಯ ಬದುಕನ್ನು ರೂಪಿಸಿಕೊಳ್ಳುವುದರ ಮೂಲಕ ಆರ್ಥಿಕವಾಗಿ ಸಬಲರಾಗಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ ಎಂದು ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಿದ್ದ ನೂತನ ವಲಯ ಹಾಗೂ 101ನೇ ಸ್ವ ಸಹಾಯ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ.ವೀರೇಂದ್ರ ಹೆಗ್ಗಡೆ ಅವರು ಹಲವು ಸಮಾಜಮುಖಿ ಕಾರ್ಯಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಗ್ರಾಮಗಳ ಅಭಿವೃದ್ಧಿ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಸಂಸ್ಥೆ ಕೃಷಿ, ಶಿಕ್ಷಣ, ಸ್ವ-ಉದ್ಯೋಗ, ಆರೋಗ್ಯ ಸೇರಿದಂತೆ ಇನ್ನಿತರ ಕ್ಷೇತ್ರಗಳಿಗೆ ಉತ್ತೇಜನ ನೀಡುತ್ತಿದೆ. ಸ್ವ-ಸಹಾಯ ಸಂಘಗಳ ಮೂಲಕ ಮಹಿಳೆಯರು ಸ್ವಾವಲಂಬನೆಯ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್ ಮಂಜುನಾಥ್ ಮಾತನಾಡಿದರು.

ಇದಕ್ಕೂ ಮೊದಲು ತಾಲೂಕಿನ ಕಾಡಂಚಿನ ಗ್ರಾಮಗಳಾದ ಕೊಂಬುಡಿಕ್ಕಿ, ಪೊನ್ನಾಚಿ, ಅಸ್ತೂರು, ಗೋಪಿನಾಥಂ, ಕೊಂಗನೂರು, ತಮ್ಮಡಗೇರಿ, ಆಣೆಹೊಲ, ಹುಲಿಗೂಡು, ಪುದೂರು ಹಾಗೂ ಮಲೆಮಹದೇಶ್ವರ ಬೆಟ್ಟ ಸೇರಿದಂತೆ ವಿವಿಧ ಭಾಗದಲ್ಲಿ ನೂತನ ವಲಯವನ್ನು ಉದ್ಘಾಟಿಸಲಾಯಿತು. ಬಳಿಕ ಸಿಂಗನಲ್ಲೂರು ಗ್ರಾಮದ ನಂಜೇಗೌಡ ಅವರ ಮನೆ ನಿರ್ಮಾಣಕ್ಕೆ ಮಂಜೂರಾತಿ ಆದೇಶ ಪ್ರತಿ, ಸಣ್ಣ ಪ್ರಮಾಣದ ಉದ್ದಿಮೆದಾರರಿಗೆ ಸಾಲ, ಮ.ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆಗೆ ಬೆಂಚು, ಡೆಸ್ಕ್ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಅರ್ಚನಾ, ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತಾಯ, ಜಿಲ್ಲಾ ನಿರ್ದೇಶಕಿ ಲತಾ ಬಂಗೇರಾ, ಜಿ.ಪಂ ಮಾಜಿ ಉಪಾಧ್ಯಕ್ಷ ಈಶ್ವರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರಾಚಪ್ಪ, ಪಿಡಿಒ ಕಿರಣ್ ವಿವಿಧ ತಾಲೂಕಿನ ಯೋಜನಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net