

ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಜನಪರ ಕಾರ್ಯಕ್ರಮಗಳನ್ನು ರೂಪಿಸಿದ ಪರಿಣಾಮವೇ ಮಹಿಳೆಯರು ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಅನೇಕ ಕಾರ್ಯಕ್ರಮಗಳು ಇಂದಿನ ಸಮಾಜಕ್ಕೆ ಪೂರಕವಾಗಿವೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳಿಗೆ ಸೇರಿದ ನಂತರ ಮಹಿಳೆಯರಲ್ಲಿ ಹೊಸ ಚೈತನ್ಯ ಮೂಡಿದೆ ಎಂದರು.
ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಅವರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಮತ್ತು ಮಹಿಳಾ ಜ್ಞಾನವಿಕಾಸ ಕೇಂದ್ರದಿಂದ ಸದಸ್ಯರಲ್ಲಾಗಿರುವ ಬದಲಾವಣೆ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ರವಿಕುಮಾರ್ ಅವರು ಸಾಮಾಜಿಕ ಜಾಲತಾಣಗಳ ಒಳಿತು ಮತ್ತು ಕೆಡುಕುಗಳ ಬಗ್ಗೆ ಮಾಹಿತಿ ನೀಡಿದರು. ಕರ್ಣಾಟಕ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕಿ ಶಾರದಮ್ಮ ಅಧ್ಯಕ್ಷತೆ ವಹಿಸಿದ್ದರು.
ಚಿತ್ರದುರ್ಗ ಪ್ರಾದೇಶಿಕ ವ್ಯಾಪ್ತಿಯ ಜ್ಞಾನವಿಕಾಸ ಯೋಜನಾಧಿಕಾರಿ ರತ್ನಾ ಮೈಪಾಲ ಅವರು ಜ್ಞಾನವಿಕಾಸ ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಪುಷ್ಪಗುಚ್ಛ, ರಂಗೋಲಿ, ಕರಕುಶಲ ವಸ್ತುಗಳ ತಯಾರಿ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.