ಶಾರದಾ ಡೈಮಂಡ್ ಎಫ್​ಐಆರ್ ರದ್ದು

High Court 3 Jan 20
Published on

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂ.ಬಿ.ಪಾಟೀಲ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದಿದ್ದರು ಎನ್ನಲಾದ ನಕಲಿಪತ್ರವನ್ನು ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಶಾರದಾ ಡೈಮಂಡ್ ವಿರುದ್ಧ ಶ್ರೀರಾಂಪುರ ಠಾಣೆಯಲ್ಲಿ ದಾಖಲಿಸಿದ್ದ ಎಫ್​ಐಆರ್​ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣ ರದ್ದು ಕೋರಿ ಶಾರದಾ ಡೈಮಂಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ ಗುರುವಾರ ಮಾನ್ಯ ಮಾಡಿದೆ. ಅರ್ಜಿದಾರರ ವಿರುದ್ಧದ ಗಂಭೀರ ಸ್ವರೂಪವಲ್ಲದ ಅಪರಾಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲು ಸಂದರ್ಭ ಪೊಲೀಸರು ನಿಯಮಗಳ ಪ್ರಕಾರ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದಿಲ್ಲ. 2015ರಲ್ಲಿ ಸುಪ್ರೀಂಕೋರ್ಟ್ ಅಸಿಂಧುಗೊಳಿಸಿರುವ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್ 66(ಎ) ಅಡಿ ಪ್ರಕರಣ ದಾಖಲಿಸಿದ್ದು, ಈ ಕ್ರಮವೂ ಕಾನೂನು ಬಾಹಿರವಾಗಿದೆ ಎಂದು ಹೇಳಿದೆ.

10 ಸಾವಿರ ದಂಡ: ಪ್ರಕರಣ ದಾಖಲಿಸುವಾಗ ಮ್ಯಾಜಿಸ್ಟ್ರೇಟ್ ಅನುಮತಿ ಪಡೆಯದ ಹಾಗೂ ಸುಪ್ರೀಂಕೋರ್ಟ್ ಅಸಿಂಧುಗೊಳಿಸಿರುವ ಸೆಕ್ಷನ್ ಅಡಿ ಅರ್ಜಿದಾರರ ವಿರುದ್ಧ ಎಫ್​ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಠಾಣೆಯ ಇನ್​ಸ್ಪೆಕ್ಟರ್, ಸಹಾಯಕ ಸಬ್ ಇನ್​ಸ್ಪೆಕ್ಟರ್​ಗೆ ತಲಾ 10 ಸಾವಿರ ರೂ. ದಂಡ ವಿಧಿಸಿರುವ ಹೈಕೋರ್ಟ್, ಅಧಿಕಾರಿಗಳು ಸ್ವಂತ ಹಣದಿಂದ ದಂಡದ ಮೊತ್ತವನ್ನು ರಿಜಿಸ್ಟ್ರಾರ್​ಗೆ ಪಾವತಿಸುವಂತೆ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net